No menu items!
25.7 C
Munich
Sunday, May 31, 2026

19 ರಾಜ್ಯಗಳಲ್ಲಿ ಭಾರೀ ಮಳೆ ಅಲರ್ಟ್; ಕೇರಳಕ್ಕೆ ಇನ್ನೊಂದು ವಾರದಲ್ಲಿ ಮುಂಗಾರು ಪ್ರವೇಶ

Must read

19 ರಾಜ್ಯಗಳಲ್ಲಿ ಭಾರೀ ಮಳೆ ಅಲರ್ಟ್; ಕೇರಳಕ್ಕೆ ಇನ್ನೊಂದು ವಾರದಲ್ಲಿ ಮುಂಗಾರು ಪ್ರವೇಶ

ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಮಳೆಯ ಚಟುವಟಿಕೆಗಳು ತೀವ್ರಗೊಳ್ಳುತ್ತಿದ್ದು, ಕೇರಳಕ್ಕೆ ಇನ್ನೊಂದು ವಾರದೊಳಗೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಇದರ ಜೊತೆಗೆ ದೇಶದ 19ಕ್ಕೂ ಹೆಚ್ಚು ರಾಜ್ಯಗಳಲ್ಲಿ ಗುಡುಗು, ಆಲಿಕಲ್ಲು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮುಂದಿನ ಎರಡು ರಿಂದ ಮೂರು ದಿನಗಳಲ್ಲಿ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಕರಾವಳಿ ಭಾಗಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದ್ದು, ಹಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಒಡಿಶಾ, ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ, ಜಮ್ಮು-ಕಾಶ್ಮೀರ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ಗಢ, ಗುಜರಾತ್ ಹಾಗೂ ಗೋವಾ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕೆಲವೆಡೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಬಿಹಾರ ಮತ್ತು ಜಾರ್ಖಂಡ್ನಲ್ಲಿ ಗಾಳಿಯ ವೇಗ 50ರಿಂದ 60 ಕಿಲೋಮೀಟರ್ವರೆಗೆ ತಲುಪಬಹುದು. ಬಿಹಾರದ ಕೆಲವು ಭಾಗಗಳಲ್ಲಿ ಗಂಟೆಗೆ 70 ಕಿಲೋಮೀಟರ್ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಮೇ 30ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಮೇ 31ರಂದು ಕೊಂಕಣ ಹಾಗೂ ಗೋವಾ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ. ಇದೇ ವೇಳೆ ಮೇ 31ರಿಂದ ಜೂನ್ 2ರವರೆಗೆ ಗುಜರಾತ್ನ ಹಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲೂ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಇಲಾಖೆ ಅಂದಾಜಿಸಿದೆ.
ರಾಜಸ್ಥಾನದಲ್ಲಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಗಳು ಆರಂಭವಾಗಿದ್ದರೂ, ಕೆಲ ಭಾಗಗಳಲ್ಲಿ ತಾಪಮಾನ ಏರಿಕೆ ಮುಂದುವರಿದಿದೆ. ಆದರೆ ಕಳೆದ ಕೆಲವು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂದಿನಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇನ್ನೊಂದೆಡೆ, ಕೇರಳದಲ್ಲಿ ಮುಂದಿನ ಏಳು ದಿನಗಳ ಕಾಲ ಮುಂಗಾರು ಚುರುಕುಗೊಳ್ಳಲಿದ್ದು, ಕೆಲ ಪ್ರದೇಶಗಳಲ್ಲಿ ಚಂಡಮಾರುತದ ಪ್ರಭಾವವೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ವರ್ಷ ಜೂನ್ನಿಂದ ಸೆಪ್ಟೆಂಬರ್ವರೆಗೆ ದೇಶದಲ್ಲಿ ವಾಡಿಕೆ ಮಳೆಯ ಸುಮಾರು ಶೇ.90ರಷ್ಟು ಮಳೆಯಾಗುವ ನಿರೀಕ್ಷೆಯಿದ್ದು, ಇದರಲ್ಲಿ ಶೇ.4ರಷ್ಟು ವ್ಯತ್ಯಾಸ ಉಂಟಾಗಬಹುದು ಎಂದು ಐಎಂಡಿ ಅಂದಾಜಿಸಿದೆ.

- Advertisement -spot_img

More articles

- Advertisement -spot_img

Latest article