ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿಕೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಹಳದಿ ಅಲರ್ಟ್ ಘೋಷಿಸಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ತಂಪಾದ ವಾತಾವರಣ ಮುಂದುವರಿಯಲಿದೆ.
ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀ ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಮಳೆ ಹಾಗೂ ಬಿರುಗಾಳಿ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಹಳೆಯ ಕಟ್ಟಡಗಳು, ವಿದ್ಯುತ್ ಕಂಬಗಳು ಹಾಗೂ ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ರೈತರು ತಮ್ಮ ಬೆಳೆ ಮತ್ತು ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.



