ಪ್ರಮಾಣವಚನಕ್ಕೂ ಮುನ್ನ ಯಡಿಯೂರಪ್ಪ ನಿವಾಸಕ್ಕೆ ಡಿಕೆಶಿ ಭೇಟಿ; ಕಾರ್ಯಕ್ರಮಕ್ಕೆ ಖುದ್ದಾಗಿ ಆಹ್ವಾನ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸಮಾರಂಭಕ್ಕೂ ಮುನ್ನ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ಸಂಜೆ ನಡೆಯಲಿರುವ ಪ್ರಮಾಣವಚನ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಖುದ್ದಾಗಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದರು.
ಭೇಟಿಯ ವೇಳೆ ರಾಜ್ಯದ ಅಭಿವೃದ್ಧಿ ಹಾಗೂ ಉತ್ತಮ ಆಡಳಿತಕ್ಕಾಗಿ ವಿರೋಧ ಪಕ್ಷದಿಂದ ಅಗತ್ಯ ಸಹಕಾರ ನೀಡುವಂತೆ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರೆಂದು ತಿಳಿದುಬಂದಿದೆ. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಹಿರಿಯ ನಾಯಕರನ್ನು ಗೌರವಿಸುವ ಉದ್ದೇಶದಿಂದ ಡಿಕೆ ಶಿವಕುಮಾರ್ ಈ ಭೇಟಿ ನಡೆಸಿರುವುದು ಗಮನಾರ್ಹವಾಗಿದೆ.
ಇಂದು ಸಂಜೆ ಬೆಂಗಳೂರಿನ ರಾಜಭವನ ಆವರಣದಲ್ಲಿರುವ ‘ಗಾಜಿನ ಮನೆ’ಯಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ವಿಶೇಷ ಆಹ್ವಾನಿತರು ಭಾಗವಹಿಸುವ ನಿರೀಕ್ಷೆಯಿದೆ.



