ಪ್ರಮಾಣವಚನಕ್ಕೂ ಮುನ್ನ ದೇವೇಗೌಡರ ಭೇಟಿ ಮಾಡಿದ ಡಿಕೆ ಶಿವಕುಮಾರ್; ಆಶೀರ್ವಾದ ಪಡೆದು ಸಮಾರಂಭಕ್ಕೆ ಆಹ್ವಾನ
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪ್ರಮಾಣವಚನ ಸಮಾರಂಭಕ್ಕೂ ಮುನ್ನ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ಇಂದು ಸಂಜೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಖುದ್ದಾಗಿ ತೆರಳಿದ ಡಿ.ಕೆ. ಶಿವಕುಮಾರ್, ಹಿರಿಯ ನಾಯಕರಿಗೆ ಗೌರವ ಸಲ್ಲಿಸಿದರು. ಭೇಟಿಯ ವೇಳೆ ದೇವೇಗೌಡರ ಕಾಲಿಗೆ ಬಿದ್ದು ನಮಸ್ಕರಿಸಿದ ಅವರು, ಆಶೀರ್ವಾದ ಪಡೆದು ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿ, ಸುಗಮ ಆಡಳಿತ ಹಾಗೂ ಜನಪರ ಯೋಜನೆಗಳ ಅನುಷ್ಠಾನಕ್ಕೆ ಹಿರಿಯರ ಮಾರ್ಗದರ್ಶನ ಮತ್ತು ಸಹಕಾರ ಅಗತ್ಯವಾಗಿದೆ ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ರಾಜ್ಯದ ಹಿತದೃಷ್ಟಿಯಿಂದ ಎಲ್ಲರ ಸಹಕಾರದೊಂದಿಗೆ ಆಡಳಿತ ನಡೆಸುವ ಸಂಕಲ್ಪವನ್ನೂ ವ್ಯಕ್ತಪಡಿಸಿದರು.
ಇಂದು ಸಂಜೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಸಾಕ್ಷಿಯಾಗಲಿದ್ದಾರೆ.
ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಹ್ವಾನಿಸಿದ್ದ ಡಿಕೆ ಶಿವಕುಮಾರ್, ಇದೀಗ ದೇವೇಗೌಡರನ್ನೂ ಖುದ್ದಾಗಿ ಭೇಟಿ ಮಾಡುವ ಮೂಲಕ ರಾಜಕೀಯ ಸೌಹಾರ್ದದ ಸಂದೇಶ ರವಾನಿಸಿದ್ದಾರೆ. ವಿರೋಧ ಪಕ್ಷಗಳ ಹಿರಿಯ ನಾಯಕರನ್ನು ಗೌರವಪೂರ್ವಕವಾಗಿ ಆಹ್ವಾನಿಸುವ ಮೂಲಕ ಅವರು ಹೊಸ ರಾಜಕೀಯ ಸಂಸ್ಕೃತಿಗೆ ನಾಂದಿ ಹಾಡಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ವಿಶೇಷವೆಂದರೆ, 1985ರ ವಿಧಾನಸಭಾ ಚುನಾವಣೆಯಲ್ಲಿ ಹೆಚ್.ಡಿ. ದೇವೇಗೌಡರ ವಿರುದ್ಧವೇ ಸ್ಪರ್ಧಿಸುವ ಮೂಲಕ ಡಿ.ಕೆ. ಶಿವಕುಮಾರ್ ತಮ್ಮ ರಾಜಕೀಯ ಪಯಣ ಆರಂಭಿಸಿದ್ದರು. ಇದೀಗ ಅದೇ ಹಿರಿಯ ನಾಯಕರ ಆಶೀರ್ವಾದ ಪಡೆದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ರಾಜ್ಯ ರಾಜಕೀಯದಲ್ಲಿ ವಿಶೇಷ ಮಹತ್ವ ಪಡೆದುಕೊಂಡಿದೆ.



