No menu items!
11.9 C
Munich
Thursday, June 4, 2026

ಕೊರೊನಾ ಲಾಕ್ ಡೌನ್ ವೇಳೆ ಕಾರ್ಮಿಕರ ವಜಾ ಪ್ರಕರಣ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

Must read

ಕೊರೊನಾ ಲಾಕ್ ಡೌನ್ ವೇಳೆ ಕಾರ್ಮಿಕರ ವಜಾ ಪ್ರಕರಣ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕಾರ್ಮಿಕ ಕಾಯ್ದೆ ಉಲ್ಲಂಘನೆ ಆರೋಪದಡಿ ಯಾವುದೇ ಕಂಪನಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಅನುಮತಿ ನೀಡುವ ಮೊದಲು ಸರ್ಕಾರವು ಸ್ವತಂತ್ರವಾಗಿ ವಿಚಾರಣೆ ನಡೆಸಿ ಸೂಕ್ತ ಕಾರಣಗಳನ್ನು ದಾಖಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಕೊರೊನಾ ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರನ್ನು ತಾತ್ಕಾಲಿಕವಾಗಿ ವಜಾಗೊಳಿಸಿದ್ದ ಆರೋಪದಲ್ಲಿ ಖಾಸಗಿ ಕಂಪನಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ‘ಇಂಟರ್ನ್ಯಾಷನಲ್ ಟ್ರಿಮ್ಮಿಂಗ್ಸ್ ಆಂಡ್ ಲೇಬಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ನ್ಯಾಯಪೀಠ, ಕೇವಲ ದೂರು ಅಥವಾ ಕಾರ್ಮಿಕ ಇಲಾಖೆಯ ವರದಿಯನ್ನು ಆಧರಿಸಿ ಯಾಂತ್ರಿಕವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರವು ತನ್ನ ಸ್ವತಂತ್ರ ವಿವೇಚನೆಯನ್ನು ಬಳಸಿಕೊಂಡು ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು. ಯಾವುದೇ ಸಂಸ್ಥೆಯ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಅನುಮತಿ ನೀಡುವಾಗ ಅಥವಾ ನಿರಾಕರಿಸುವಾಗ ಅದರ ಹಿಂದಿನ ಕಾರಣಗಳನ್ನು ಆದೇಶದಲ್ಲಿ ದಾಖಲಿಸುವುದು ಕಡ್ಡಾಯ ಎಂದು ನ್ಯಾಯಾಲಯ ತಿಳಿಸಿದೆ.
ಪ್ರಸ್ತುತ ಪ್ರಕರಣದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ‘ನೈಸರ್ಗಿಕ ವಿಕೋಪ’ ಎಂದು ಪರಿಗಣಿಸಿ ಸಿಬ್ಬಂದಿಯನ್ನು ವಜಾಗೊಳಿಸಲಾಗಿತ್ತೇ ಎಂಬ ಪ್ರಶ್ನೆ ಪ್ರಮುಖವಾಗಿದೆ. ಇದೇ ವಿಚಾರ ಈಗಾಗಲೇ ಕಾರ್ಮಿಕ ನ್ಯಾಯಾಲಯದ ಪರಿಶೀಲನೆಯಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಯಾವುದೇ ಸ್ವತಂತ್ರ ಕಾರಣ ನೀಡದೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಾಲಯ, ಮೂರು ತಿಂಗಳೊಳಗೆ ಪ್ರಕರಣವನ್ನು ಮರುಪರಿಶೀಲಿಸಿ ಕಾನೂನುಬದ್ಧವಾಗಿ ಹೊಸ ಆದೇಶ ಹೊರಡಿಸುವಂತೆ ಸೂಚಿಸಿದೆ.
ಪ್ರಕರಣದ ಹಿನ್ನೆಲೆ
2020ರ ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಅರ್ಜಿದಾರ ಕಂಪನಿಯು ತನ್ನ 112 ಕಾರ್ಮಿಕರ ಪೈಕಿ 61 ಮಂದಿಯನ್ನು ಕೆಲಸದಿಂದ ವಜಾಗೊಳಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ಕಾರ್ಮಿಕ ಸಂಘಟನೆ ಕಾರ್ಮಿಕ ಆಯುಕ್ತರಿಗೆ ದೂರು ಸಲ್ಲಿಸಿತ್ತು. ಬಳಿಕ ಕಾರ್ಮಿಕ ಇಲಾಖೆಯ ವರದಿ ಆಧರಿಸಿ ಕೈಗಾರಿಕಾ ವಿವಾದಗಳ ಕಾಯ್ದೆ-1947ರ ಸೆಕ್ಷನ್ 34 ಅಡಿಯಲ್ಲಿ ಕಂಪನಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರವು 2020ರ ಡಿಸೆಂಬರ್ 7ರಂದು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ ಮೊರೆ ಹೋಗಿತ್ತು.

- Advertisement -spot_img

More articles

- Advertisement -spot_img

Latest article