No menu items!
10 C
Munich
Friday, June 5, 2026

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ: ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Must read

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ: ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ಮೊದಲ ರಾಜೀನಾಮೆ ಪ್ರಕಟವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಶುಕ್ರವಾರ ಬೆಂಗಳೂರಿನ ಕೋರಮಂಗಲದಲ್ಲಿರುವ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ರಾಜೀನಾಮೆ ನಿರ್ಧಾರದ ಹಿಂದಿನ ಕಾರಣಗಳನ್ನು ವಿವರಿಸಿದರು. ತಮಗೆ ಜಲಸಂಪನ್ಮೂಲ ಇಲಾಖೆ ನೀಡಿರುವುದೇ ರಾಜೀನಾಮೆಗೆ ಏಕೈಕ ಕಾರಣವಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗುವ ಮುನ್ನ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ ಖಾತೆ ಹಂಚಿಕೆ ವೇಳೆ ಆ ಭರವಸೆ ಈಡೇರಿಲ್ಲ. ಈ ವಿಷಯವನ್ನು ಜನರ ಮುಂದಿಡುವುದು ಅಗತ್ಯವಾಗಿದ್ದರಿಂದಲೇ ತಾವು ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾಗಿ ರಾಮಲಿಂಗಾ ರೆಡ್ಡಿ ಹೇಳಿದರು.
ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಥವಾ ಹಿರಿಯ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ವೈಯಕ್ತಿಕ ಅಸಮಾಧಾನ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದರು. ತಾವು ಯಾವ ಕಾರಣಕ್ಕಾಗಿ ಸಚಿವ ಸ್ಥಾನ ತ್ಯಜಿಸುತ್ತಿದ್ದೇವೆ ಎಂಬ ಸತ್ಯ ಜನರಿಗೆ ತಿಳಿಯಬೇಕೆಂಬ ಉದ್ದೇಶದಿಂದಲೇ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.
ಕಳೆದ 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿರುವುದಾಗಿ ಹೇಳಿದ ರಾಮಲಿಂಗಾ ರೆಡ್ಡಿ, ಪಕ್ಷವು ತಮ್ಮ ರಾಜಕೀಯ ಜೀವನದಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಿದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು. ತಾವು ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇವೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ ಎಂದು ಅವರು ಪುನರುಚ್ಚರಿಸಿದರು.
“ನಾನು ನನ್ನ ರಾಜಕೀಯ ಜೀವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಂದಿಗೂ ರಾಜೀನಾಮೆ ನೀಡಿಲ್ಲ. ಮುಂದೆಯೂ ಪಕ್ಷವನ್ನು ತೊರೆಯುವ ಪ್ರಶ್ನೆಯೇ ಇಲ್ಲ. ನನ್ನ ನಿಷ್ಠೆ ಕಾಂಗ್ರೆಸ್ನೊಂದಿಗೇ ಮುಂದುವರಿಯಲಿದೆ,” ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

- Advertisement -spot_img

More articles

- Advertisement -spot_img

Latest article