ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದಿದ್ದಾರೆ, ಆದರೆ ನನ್ನ ನಿಲುವು ಬದಲಾಗಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ
ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ತಿಳಿಸಿದ್ದರೂ, ಸದ್ಯಕ್ಕೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜೀನಾಮೆ ಹಿಂಪಡೆಯುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕತ್ವ ತಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ಬಗೆಹರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.
“ನಿನ್ನೆ ನಾನು ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಸುರ್ಜೇವಾಲಾ ಅವರು ದೂರವಾಣಿ ಕರೆ ಮಾಡಿದ್ದರು. ಇಂದು ಬೆಳಗ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ನಿನ್ನೆ ಮುಖ್ಯಮಂತ್ರಿ ಅವರು ನನ್ನನ್ನು ಭೇಟಿ ಮಾಡಲು ಬಯಸಿದ್ದರು. ನಾನು ಹೋಟೆಲ್ನಲ್ಲಿ ಇದ್ದಾಗ ಅಲ್ಲಿಗೂ ಬಂದು ಮಾತುಕತೆ ನಡೆಸಿದರು. ರಾಜೀನಾಮೆ ಅಂಗೀಕರಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ” ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.
ನೀರಾವರಿ ಇಲಾಖೆಯಂತಹ ಹೊಸ ಖಾತೆ ಕುರಿತು ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದ ಅವರು, “ಈ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಸುರ್ಜೇವಾಲಾ ಅವರು ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು” ಎಂದರು.
ಇದೇ ವೇಳೆ ಬೆಂಗಳೂರು ಅಭಿವೃದ್ಧಿ ಖಾತೆ ವಿಚಾರವಾಗಿ ತಮ್ಮ ಅಸಮಾಧಾನವನ್ನು ಮತ್ತೊಮ್ಮೆ ವ್ಯಕ್ತಪಡಿಸಿದ ರಾಮಲಿಂಗಾರೆಡ್ಡಿ, “2023 ಹಾಗೂ 2026ರಲ್ಲಿ ಎರಡು ಬಾರಿ ನನಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಅದು ಈಡೇರಿಲ್ಲ. ಆದರೂ ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ನಾಯಕತ್ವ ಹೇಳುತ್ತಿದೆ” ಎಂದು ಹೇಳಿದರು.
ರಾಜಕೀಯ ಬೆಳವಣಿಗೆಗಳ ಕುರಿತು ಆಶಾವಾದ ವ್ಯಕ್ತಪಡಿಸಿದ ಅವರು, “ಇಂದು ಸಂಜೆಯೊಳಗೆ ಗೊಂದಲಕ್ಕೆ ಪರಿಹಾರ ಸಿಗುವ ವಿಶ್ವಾಸವಿದೆ. ನಕಾರಾತ್ಮಕವಾಗಿ ಯೋಚಿಸುವ ಅಗತ್ಯವಿಲ್ಲ. ಎಲ್ಲರೂ ಸಕಾರಾತ್ಮಕವಾಗಿ ಇರೋಣ. ಮುಖ್ಯಮಂತ್ರಿ ಮತ್ತು ಸುರ್ಜೇವಾಲಾ ಅವರು ಚರ್ಚೆ ನಡೆಸುತ್ತಿದ್ದಾರೆ. ಮತ್ತೆ ಮಾತುಕತೆಗೆ ಕರೆದರೆ ಖಂಡಿತವಾಗಿ ಹೋಗುತ್ತೇನೆ” ಎಂದು ಹೇಳಿದರು.



