ಕೊಲ್ಲೂರು ಮೂಕಾಂಬಿಕೆಗೆ ಬೆಳ್ಳಿಯ ಕತ್ತಿ ಕಡಗ ಅರ್ಪಿಸಿದ ಸಿಎಂ ಜೋಸೆಫ್ ವಿಜಯ್
ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ದೇವಿಗೆ ಭಕ್ತಿಪೂರ್ವಕವಾಗಿ ಬೆಳ್ಳಿಯ ಖಡ್ಗವನ್ನು ಸಮರ್ಪಿಸಿದರು.
ಇದಕ್ಕೂ ಮುನ್ನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಜಯ್, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಿದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ಬಳಿಕ ದೇವಾಲಯ ಪ್ರವೇಶಿಸಿದ ಮುಖ್ಯಮಂತ್ರಿ ವಿಜಯ್ ಅವರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು.
ಸಿಎಂ ವಿಜಯ್ ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತರ ಸಂಚಾರವನ್ನು ನಿಯಂತ್ರಿಸಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು. ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ದೇವಸ್ಥಾನಕ್ಕೆ ಆಗಮಿಸುವ ಪ್ರಮುಖ ಮಾರ್ಗಗಳಲ್ಲಿಯೂ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಸಿಎಂ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಭಕ್ತರು ಸೇರಿದ್ದು, ವಿಜಯ್ ಅವರನ್ನು ಕಂಡು ಸಂಭ್ರಮ ವ್ಯಕ್ತಪಡಿಸಿದರು.



