ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಗಂಭೀರ
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ಕೊಳ್ಳೇಗಾಲ ನ್ಯಾಯಾಲಯದ ಶಿರಸ್ತೇದಾರ ನಂಜುಂಡಪ್ಪ ಹಾಗೂ ನ್ಯಾಯಾಲಯದ ಸಿಬ್ಬಂದಿ ಯಮುನಪ್ಪ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಕೃಷ್ಣಪ್ಪ, ಲೋಕೇಶ್ ಹಾಗೂ ಶಂಕರಪ್ಪ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಕೊಳ್ಳೇಗಾಲ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಪಘಾತಕ್ಕೀಡಾದ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.
ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.



