ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ‘ಪ್ರಜಾಸೇವೆ ಇಲಾಖೆ’ ಸ್ಥಾಪನೆ: ಸಚಿವ ಸಂಪುಟದ ಮಹತ್ವದ ನಿರ್ಧಾರ
ಬೆಂಗಳೂರು: ಜನರ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಎರಡನೇ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಡುವ ನಿಟ್ಟಿನಲ್ಲಿ ಈ ಹೊಸ ಇಲಾಖೆಯನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಇಲಾಖೆಗೆ ಪ್ರತ್ಯೇಕ ಸಚಿವರು ಹಾಗೂ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ಜನರ ಅಹವಾಲುಗಳನ್ನು ಕೇವಲ ಸ್ವೀಕರಿಸುವುದಲ್ಲ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಜವಾಬ್ದಾರಿಯನ್ನು ಇಲಾಖೆ ಹೊತ್ತುಕೊಳ್ಳಲಿದೆ ಎಂದು ಸಿಎಂ ಹೇಳಿದರು.
ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಚಿವರು ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ವಾರಕ್ಕೊಮ್ಮೆ ಜನಸ್ಪಂದನ ಸಭೆ ನಡೆಸಿ, ಅಲ್ಲಿ ಸಂಗ್ರಹವಾಗುವ ಅಹವಾಲುಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ಕಾರ್ಯ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.
ಸಾರ್ವಜನಿಕರ ಸಮಸ್ಯೆಗಳ ಕುರಿತು ನೇರವಾಗಿ ಮಾಹಿತಿ ಪಡೆದು, ಸಂಬಂಧಿತ ಇಲಾಖೆಗಳ ಮೂಲಕ ಪರಿಹಾರ ನೀಡುವ ವ್ಯವಸ್ಥೆಯನ್ನು ಈ ಇಲಾಖೆಯ ಮೂಲಕ ಜಾರಿಗೆ ತರಲಾಗುತ್ತದೆ. ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ಕುಂದುಕೊರತೆಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ವ್ಯವಸ್ಥೆ ರೂಪಿಸಲಾಗುವುದು ಎಂದು ತಿಳಿಸಿದರು.
ಇತ್ತೀಚೆಗೆ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿಯೂ ಸಾರ್ವಜನಿಕರ ಅಹವಾಲುಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ಚರ್ಚೆ ನಡೆದಿತ್ತು. ಇದೀಗ ಸಚಿವ ಸಂಪುಟದಿಂದಲೂ ಅನುಮೋದನೆ ದೊರೆತಿದ್ದು, ‘ಪ್ರಜಾಸೇವೆ ಇಲಾಖೆ’ ಎಂಬ ಹೆಸರಿನಲ್ಲಿ ಹೊಸ ವ್ಯವಸ್ಥೆ ಜಾರಿಯಾಗಲಿದೆ.
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಹೇಗೆ ಸಲ್ಲಿಸಬೇಕು, ಯಾವ ಅಧಿಕಾರಿಗಳು ಮತ್ತು ಸಚಿವರು ಇದರ ಹೊಣೆ ಹೊರುತ್ತಾರೆ ಎಂಬ ಕುರಿತು ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ.
ಪ್ರತಿದಿನ ವಿವಿಧ ಬೇಡಿಕೆಗಳಿಗಾಗಿ ನಡೆಯುವ ಪ್ರತಿಭಟನೆಗಳ ಹಿಂದಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಅವುಗಳಿಗೆ ಸ್ಪಂದಿಸುವ ಉದ್ದೇಶದಿಂದಲೇ ಈ ಹೊಸ ಇಲಾಖೆಯನ್ನು ರಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.



