ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳಿಗೆ ಭಕ್ತರ ಅಂತಿಮ ನಮನ: ಭಾವುಕರಾದ ಸಿಎಂ ಡಿ.ಕೆ. ಶಿವಕುಮಾರ್
ರಾಮನಗರ ಜಿಲ್ಲೆಯ ಕನಕಪುರದ ಐತಿಹಾಸಿಕ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮಠದಲ್ಲಿ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರ ದಂಡೇ ಹರಿದುಬಂತು. ಸಾವಿರಾರು ಮಂದಿ ಶ್ರೀಗಳ ಅಂತಿಮ ದರ್ಶನ ಪಡೆದು ಭಕ್ತಿಪೂರ್ವಕವಾಗಿ ನಮನ ಸಲ್ಲಿಸಿದರು.
ರಾಜ್ಯದ ವಿವಿಧ ಮಠಗಳ ಮಠಾಧೀಶರು, ಭಕ್ತರು ಹಾಗೂ ಸಾರ್ವಜನಿಕರು ಮಠಕ್ಕೆ ಆಗಮಿಸಿ ಶ್ರೀಗಳ ಪಾದಗಳಿಗೆ ನಮಸ್ಕರಿಸಿ ಗೌರವ ಅರ್ಪಿಸಿದರು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೂಡ ಮಠಕ್ಕೆ ಭೇಟಿ ನೀಡಿ ಶ್ರೀಗಳ ಅಂತಿಮ ದರ್ಶನ ಪಡೆದರು.
ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಠಕ್ಕೆ ಆಗಮಿಸಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್. ರವಿ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಶ್ರೀಗಳೊಂದಿಗಿನ ತಮ್ಮ ಆತ್ಮೀಯ ಒಡನಾಟವನ್ನು ನೆನೆದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದರು. ನಂತರ ಶ್ರೀಗಳ ಪಾರ್ಥಿವ ಶರೀರದ ಮೇಲೆ ತ್ರಿವರ್ಣ ಧ್ವಜ ಹೊದಿಸಿ, ಮೂರು ಸುತ್ತು ಗುಂಡು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು.
ಕಿರಿಯ ಶ್ರೀಗಳಿಗೆ ತ್ರಿವರ್ಣ ಧ್ವಜ ಹಸ್ತಾಂತರಿಸುವ ವೇಳೆ ಸಿಎಂ ಗದ್ಗದಿತರಾದರು. ಶ್ರೀಗಳ ಅಗಲಿಕೆಗೆ ಕಣ್ಣೀರಿನ ವಿದಾಯ ಹೇಳಿದ ಬಳಿಕ ಮುಖ್ಯಮಂತ್ರಿ ಹಾಗೂ ಸಚಿವ ಈಶ್ವರ್ ಖಂಡ್ರೆ ಮಠದ ಆವರಣದಲ್ಲೇ ಕೆಲಕಾಲ ಕುಳಿತು ಶ್ರೀಗಳ ಸೇವೆ, ಸಾಧನೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.



