ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಮೆಟ್ಟಿಲೇರಿದ ದರ್ಶನ್, ಜಾಮೀನು ಅರ್ಜಿ ನಿರ್ಬಂಧ ಆದೇಶ ಮಾರ್ಪಾಡಿಗೆ ಮನವಿ
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರು ಮತ್ತೊಮ್ಮೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಒಂದು ವರ್ಷದವರೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನೀಡಲಾಗಿದ್ದ ಆದೇಶವನ್ನು ಮಾರ್ಪಾಡು ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಹೊಸ ವಕೀಲರ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ, ವೈಯಕ್ತಿಕ ಸ್ವಾತಂತ್ರ್ಯ ಹಾಗೂ ತ್ವರಿತ ವಿಚಾರಣೆಯ ಹಕ್ಕು ಭಾರತೀಯ ಸಂವಿಧಾನದ ಆರ್ಟಿಕಲ್ 21ರ ಅಡಿಯಲ್ಲಿ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕುಗಳಾಗಿವೆ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ರೀತಿಯಲ್ಲಿ ಆದೇಶವನ್ನು ಪರಿಷ್ಕರಿಸಬೇಕು ಎಂದು ಕೋರಲಾಗಿದೆ.
ಪ್ರಸ್ತುತ ಜಾರಿಯಲ್ಲಿರುವ ಆದೇಶದ ಪ್ರಕಾರ ಒಂದು ವರ್ಷದ ಅವಧಿಯೊಳಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಆದರೆ ಈ ನಿರ್ಬಂಧದಿಂದ ವಿಚಾರಣೆಯ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಜೊತೆಗೆ ವೈದ್ಯಕೀಯ ತುರ್ತು ಪರಿಸ್ಥಿತಿ ಅಥವಾ ಮಾನವೀಯ ನೆಲೆಯಲ್ಲಿ ಜಾಮೀನು ಕೋರಲು ಅವಕಾಶ ಸಿಗುವುದಿಲ್ಲ ಎಂಬ ವಾದವನ್ನು ದರ್ಶನ್ ಪರವಾಗಿ ಮಂಡಿಸಲಾಗಿದೆ.
ಅರ್ಜಿಯಲ್ಲಿ, ದೀರ್ಘಾವಧಿಯ ಬಂಧನವನ್ನು ಕಾಲಕಾಲಕ್ಕೆ ನ್ಯಾಯಾಲಯ ಪರಿಶೀಲಿಸುವುದು ಅಗತ್ಯವಾಗಿದೆ ಎಂದು ತಿಳಿಸಲಾಗಿದೆ. ನಿರಂತರ ಬಂಧನದಿಂದ ತಮ್ಮ ವೃತ್ತಿಜೀವನ, ಜೀವನೋಪಾಯ ಹಾಗೂ ಕುಟುಂಬದ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ ಎಂದು ದರ್ಶನ್ ಹೇಳಿದ್ದಾರೆ.
ಅಲ್ಲದೆ, ತಮ್ಮ ತಾಯಿ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಒಂದು ವರ್ಷದವರೆಗೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ನಿರಾಕರಿಸಿರುವುದು ವ್ಯಾಪಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಹೀಗಾಗಿ ಒಂದು ವರ್ಷದವರೆಗೆ ಜಾಮೀನು ಕೋರದಂತೆ ವಿಧಿಸಿರುವ ನಿರ್ಬಂಧವನ್ನು ಸಡಿಲಗೊಳಿಸಿ, ಅಗತ್ಯ ಸಂದರ್ಭಗಳಲ್ಲಿ ನ್ಯಾಯಾಲಯದ ಮೊರೆ ಹೋಗಲು ಅವಕಾಶ ನೀಡಬೇಕು ಎಂದು ದರ್ಶನ್ ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದಾರೆ.



