No menu items!
33.5 C
Munich
Thursday, June 25, 2026

ವಚನಾನಂದ ಸ್ವಾಮೀಜಿಗೆ ಬಿಗ್ ಶಾಕ್; ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದು

Must read

ವಚನಾನಂದ ಸ್ವಾಮೀಜಿಗೆ ಬಿಗ್ ಶಾಕ್; ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದು

ಬೆಂಗಳೂರು/ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ವಚನಾನಂದ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಆಘಾತ ನೀಡಿದ್ದು, ಅವರಿಗೆ ಮಂಜೂರಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಎಫ್ಐಆರ್ ದಾಖಲಾಗುವ ಮೊದಲೇ ನಿರೀಕ್ಷಣಾ ಜಾಮೀನು ನೀಡಿರುವ ಕ್ರಮದ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.
ಪ್ರಕರಣದಲ್ಲಿ ಗಂಭೀರ ಸ್ವರೂಪದ ಪೋಕ್ಸೋ ಕಾಯ್ದೆಯ ಸೆಕ್ಷನ್ಗಳು ಅನ್ವಯವಾಗಿರುವ ಹಿನ್ನೆಲೆಯಲ್ಲಿ, ಕಾನೂನು ಪ್ರಕ್ರಿಯೆಯನ್ನು ಅನುಸರಿಸದೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದು ಸಮಂಜಸವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆಯಲ್ಲಿ ವಚನಾನಂದ ಸ್ವಾಮೀಜಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆದರೆ, ನಿಯಮಿತ (ರೆಗ್ಯುಲರ್) ಜಾಮೀನು ಕೋರಿ ಅರ್ಜಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶವನ್ನು ನ್ಯಾಯಾಲಯ ನೀಡಿದೆ.
ಅಲ್ಲದೆ, ಆ ಅವಧಿಯವರೆಗೆ ನಿರೀಕ್ಷಣಾ ಜಾಮೀನಿನ ರಕ್ಷಣೆಯನ್ನು ಮುಂದುವರಿಸಲು ಅವಕಾಶ ಕಲ್ಪಿಸಿರುವುದರಿಂದ ಸ್ವಾಮೀಜಿಗೆ ತಾತ್ಕಾಲಿಕ ನೆಮ್ಮದಿ ದೊರೆತಂತಾಗಿದೆ.
ಈ ಹಿಂದೆ ನಡೆದ ವಿಚಾರಣೆ ವೇಳೆ, ಗಂಭೀರ ಆರೋಪಗಳಿರುವ ಪೋಕ್ಸೋ ಪ್ರಕರಣದಲ್ಲೂ ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿರುವ ಕ್ರಮದ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಬಳಿಕ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಲಾಗಿತ್ತು.
ಇಂದು ನಡೆದ ಅಂತಿಮ ವಿಚಾರಣೆಯಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿ ಆದೇಶ ನೀಡಿದ್ದು, ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಗಮನ ಸೆಳೆದಿದೆ.

- Advertisement -spot_img

More articles

- Advertisement -spot_img

Latest article