ಕೇತನ್ ಅಗರ್ವಾಲ್ ಕೊಲೆ ಪ್ರಕರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಹಿರಿಯ ವಕೀಲ ಉಜ್ವಲ್ ನಿಕಮ್ ನೇಮಕ!
ಮುಂಬೈ: ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಪುಣೆ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ಮತ್ತು ವಿಚಾರಣೆಗೆ ವೇಗ ನೀಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಪ್ರಕರಣದಲ್ಲಿ ಖ್ಯಾತ ಹಿರಿಯ ವಕೀಲ ಉಜ್ವಲ್ ನಿಕಮ್ ಅವರನ್ನು ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ (SPP) ನೇಮಕ ಮಾಡಲು ಸರ್ಕಾರ ಮುಂದಾಗಿದೆ.
ಪುಣೆಯ ಐತಿಹಾಸಿಕ ಲೋಹಗಡ್ ಕೋಟೆಯಲ್ಲಿ ಕೇತನ್ ಅಗರ್ವಾಲ್ ಅವರನ್ನು ಭಾವಿ ಪತ್ನಿ ಸಿಯಾ ಗೋಯಲ್ ಹಾಗೂ ಆಕೆಯ ಪ್ರಿಯಕರ ಚೇತನ್ ಚೌಧರಿ ಸೇರಿ ಕಂದಕಕ್ಕೆ ತಳ್ಳಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಕೇತನ್ ಕುಟುಂಬದ ಸದಸ್ಯರು ಶುಕ್ರವಾರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ, ಪ್ರಕರಣದ ತ್ವರಿತ ವಿಚಾರಣೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮನವಿ ಸಲ್ಲಿಸಿದ್ದರು.
ಕುಟುಂಬದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇತನ್ ಕುಟುಂಬಕ್ಕೆ ಸಾಂತ್ವನ ಹೇಳಿ, ಪ್ರಕರಣದ ಆರೋಪಿಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ, ಪ್ರಕರಣದ ಶೀಘ್ರ ವಿಚಾರಣೆಗೆ ವಿಶೇಷ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯ ಸ್ಥಾಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿ, ಹಿರಿಯ ವಕೀಲ ಉಜ್ವಲ್ ನಿಕಮ್ ಅವರನ್ನು ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೇಮಿಸುವಂತೆ ಸಲ್ಲಿಸಿದ್ದ ಮನವಿಯನ್ನೂ ಅಂಗೀಕರಿಸಿದ್ದಾರೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಕಾನೂನು ಮತ್ತು ನ್ಯಾಯಾಂಗ ಇಲಾಖೆಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿ ಕಚೇರಿ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಕೇತನ್ ತಂದೆ ವಿಶಾಲ್ ಅಗರ್ವಾಲ್ ಸಲ್ಲಿಸಿದ್ದ ಮನವಿಯನ್ನು ಮುಖ್ಯಮಂತ್ರಿ ತಕ್ಷಣವೇ ಒಪ್ಪಿಕೊಂಡಿದ್ದಾರೆ. ಜೊತೆಗೆ, ಈ ಪ್ರಕರಣದಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಕಾರ್ಯನಿರ್ವಹಿಸಲು ಉಜ್ವಲ್ ನಿಕಮ್ ಸಹ ತಮ್ಮ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದೆ.
ಪ್ರಸ್ತುತ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾವಿ ಪತ್ನಿ ಸಿಯಾ ಗೋಯಲ್ ಹಾಗೂ ಆಕೆಯ ಸ್ನೇಹಿತ ಚೇತನ್ ಚೌಧರಿ ಅವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.



