ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರದ ಮುನ್ಸೂಚನೆ; 3 ಜಿಲ್ಲೆಗಳಿಗೆ ಆರೆಂಜ್, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ರಿಂದ ಮೂರು ದಿನಗಳವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಜುಲೈ ತಿಂಗಳಲ್ಲಿ ಮುಂಗಾರು ಮತ್ತಷ್ಟು ಬಿರುಸು ಪಡೆಯುವ ನಿರೀಕ್ಷೆಯಿದ್ದು, ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ನದಿ-ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ಪ್ರಯಾಣಿಕರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ತುಂತುರು ಮಳೆಯೊಂದಿಗೆ ತಂಪಾದ ಗಾಳಿ ಬೀಸುತ್ತಿದ್ದು, ನಗರದಲ್ಲಿ ಆಹ್ಲಾದಕರ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಕೆಲ ದಿನಗಳವರೆಗೆ ಇದೇ ರೀತಿಯ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



