ಮತದಾರರ ಪಟ್ಟಿ ಪರಿಷ್ಕರಣೆ ನಿರತ ಬಿಎಲ್ಒ ಹೃದಯಾಘಾತದಿಂದ ಸಾವು
ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದ ವೇಳೆ ಮತ್ತೊಬ್ಬ ಬೂತ್ ಮಟ್ಟದ ಅಧಿಕಾರಿ (BLO) ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಭಾಲ್ಕಿ ಮೂಲದ 45 ವರ್ಷದ ಸುನೀಲ್ ಎಂದು ಗುರುತಿಸಲಾಗಿದೆ.
ಇತ್ತೀಚೆಗಷ್ಟೇ ಎಸ್‌ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಅಪಘಾತದಲ್ಲಿ ಗಾಯಗೊಂಡು ಗ್ರಾಮ ಆಡಳಿತಾಧಿಕಾರಿ (VAO) ಭುವನಾ ಮೃತಪಟ್ಟ ಘಟನೆಗೆ ಸಂಬಂಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ದುರ್ಘಟನೆ ಸಂಭವಿಸಿದೆ.
ಅಮಲಾಪುರ ಗ್ರಾಮದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸರ್ವೆ ನಡೆಸುತ್ತಿದ್ದ ವೇಳೆ ಸುನೀಲ್ ಅವರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ವೇಳೆ ಸ್ಟಂಟ್ ಅಳವಡಿಸುವ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಈ ಘಟನೆ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.



