No menu items!
28.4 C
Munich
Friday, July 10, 2026

ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳ ಕಲ್ಪಿಸುತ್ತೇವೆ; ಸ್ವಚ್ಛ ಬೆಂಗಳೂರು ನಮ್ಮ ಗುರಿ – ಡಿ.ಕೆ. ಶಿವಕುಮಾರ್

Must read

ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳ ಕಲ್ಪಿಸುತ್ತೇವೆ; ಸ್ವಚ್ಛ ಬೆಂಗಳೂರು ನಮ್ಮ ಗುರಿ – ಡಿ.ಕೆ. ಶಿವಕುಮಾರ್

ಬೆಂಗಳೂರು: ನಗರದಲ್ಲಿ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ಉದ್ದೇಶದಿಂದ ನಡೆಯುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಜುಲೈ 1ರಿಂದ ಇದುವರೆಗೆ ಒಟ್ಟು 435 ಕಿಲೋಮೀಟರ್ ಉದ್ದದ ಪಾದಚಾರಿ ಮಾರ್ಗಗಳಲ್ಲಿ 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಗರದ ವಿವಿಧ ಪ್ರದೇಶಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಹಾಗೂ ಬೀದಿಬದಿ ವ್ಯಾಪಾರಿಗಳ ಸ್ಥಳಾಂತರ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಲು ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿದ ಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರಿಂದ ಮಾಹಿತಿ ಪಡೆದ ಬಳಿಕ ಜಯನಗರದ ಅಶೋಕ ಸ್ತಂಭದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಸದ್ಯದ ಕಾರ್ಯಾಚರಣೆಯಲ್ಲಿ 1,340 ಅಂಗಡಿಗಳು, ಸುಮಾರು 1,800 ತಳ್ಳುವ ಗಾಡಿಗಳು, 2,267 ತಗಡಿನ ಶೀಟ್ಗಳು, 2,300 ಮೆಟ್ಟಿಲು ಹಾಗೂ ರ್ಯಾಂಪ್ಗಳು, 2,662 ಕಂಬಗಳು ಮತ್ತು ಜಾಹೀರಾತು ಫಲಕಗಳು ಹಾಗೂ 2,247 ಶೆಡ್ಗಳನ್ನು ತೆರವುಗೊಳಿಸಲಾಗಿದೆ ಎಂದು ಅವರು ವಿವರಿಸಿದರು. ತೆರವುಗೊಳಿಸಿದ ತ್ಯಾಜ್ಯವನ್ನು ವಿಲೇವಾರಿ ಮಾಡುವುದರ ಜೊತೆಗೆ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವೂ ಸಮಾನಾಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.
ಬೀದಿಬದಿ ವ್ಯಾಪಾರಿಗಳ ಕುರಿತು ಮಾತನಾಡಿದ ಮುಖ್ಯಮಂತ್ರಿ, “ಬಡವರು ನಮ್ಮವರೇ. ಅವರಿಗೆ ತೊಂದರೆ ನೀಡುವುದು ಸರ್ಕಾರದ ಉದ್ದೇಶವಲ್ಲ. ಆದರೆ ಖಾಸಗಿ ಅಥವಾ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ವ್ಯಾಪಾರ ಮಾಡಲು ಅವಕಾಶ ಇರುವುದಿಲ್ಲ. ಸರ್ಕಾರವೇ ಸೂಕ್ತ ಸ್ಥಳಗಳನ್ನು ಗುರುತಿಸಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುತ್ತದೆ” ಎಂದು ಸ್ಪಷ್ಟಪಡಿಸಿದರು.
ಹಿಂದೆ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡುವ ಪ್ರಕ್ರಿಯೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಇದೀಗ ಆ ಪ್ರಕ್ರಿಯೆಯನ್ನು ಮರುಪ್ರಾರಂಭಿಸಿ, ಗುರುತಿಸಲಾದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಒತ್ತುವರಿ ತೆರವು ಕಾರ್ಯಾಚರಣೆಗೆ ಟೀಕೆಗಳು ಬರುತ್ತಿರುವುದನ್ನು ಉಲ್ಲೇಖಿಸಿದ ಸಿಎಂ, “ಬೆಂಗಳೂರು ಅಭಿವೃದ್ಧಿಗಾಗಿ ಬರುವ ಟೀಕೆಗಳನ್ನು ಸ್ವೀಕರಿಸಲು ನಾವು ಸಿದ್ಧರಾಗಿದ್ದೇವೆ. ಈ ಒತ್ತುವರಿಗಳ ಹಿಂದೆ ದೊಡ್ಡ ಮಾಫಿಯಾ ಕೆಲಸ ಮಾಡುತ್ತಿದೆ. ಕೆಲವು ರೌಡಿಗಳು ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿರುವ ಮಾಹಿತಿ ಸರ್ಕಾರದ ಬಳಿ ಇದೆ. ಪೊಲೀಸ್ ಹಾಗೂ ಜಿಬಿಎ ಅಧಿಕಾರಿಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಸ್ವಚ್ಛ ಬೆಂಗಳೂರು ನಿರ್ಮಾಣವೇ ನಮ್ಮ ಗುರಿ” ಎಂದರು.
ಕಳೆದ ಮೂರು ವರ್ಷಗಳಲ್ಲಿ ನಗರದಲ್ಲಿ 900ಕ್ಕೂ ಹೆಚ್ಚು ಪಾದಚಾರಿಗಳು ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ ಅವರು, ಪಾದಚಾರಿ ಮಾರ್ಗಗಳು ಅತಿಕ್ರಮಣವಾಗಿದ್ದರೆ ಜನರು ರಸ್ತೆಯಲ್ಲೇ ನಡೆಯಬೇಕಾಗುತ್ತದೆ. ಇದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಸಾರ್ವಜನಿಕರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article