ಕೆಪಿಸಿಸಿ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆತ; ಪೊಲೀಸ್ ಆಯುಕ್ತರಿಗೆ ಬಿಜೆಪಿ ದೂರು
ಬೆಂಗಳೂರು: ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಬಿಜೆಪಿ ಹಮ್ಮಿಕೊಂಡಿದ್ದ ಮುತ್ತಿಗೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಿಜೆಪಿ ಶಾಸಕ ಬಿ.ಪಿ. ಹರೀಶ್ ಸೇರಿದಂತೆ ಹಲವು ಮುಖಂಡರ ಮೇಲೆ ಮೊಟ್ಟೆ ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಬಿಜೆಪಿ ಅಧಿಕೃತ ದೂರು ಸಲ್ಲಿಸಿದೆ.
ದೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಬಿ.ಪಿ. ಹರೀಶ್ ಹಾಗೂ ಮಲ್ಲೇಶ್ವರಂ ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಬಿಜೆಪಿ ಕಾರ್ಯಕರ್ತ ಪ್ರಶಾಂತ್ ಹಾಗೂ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಅವರ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ, ಪ್ರತಿಭಟನೆಯ ಬಳಿಕ ಪೊಲೀಸರ ವಶದಲ್ಲಿದ್ದ ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆಯೂ ದಾಳಿ ನಡೆಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹರೀಶ್ ಸೇರಿದಂತೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಹಲವು ಬಿಜೆಪಿ ಮುಖಂಡರ ಮೇಲೂ ಹಲ್ಲೆ ನಡೆದಿದ್ದು, ಘಟನೆಗೆ ಕಾರಣರಾದವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಬಿ.ಪಿ. ಹರೀಶ್, “ವಿಪಕ್ಷ ನಾಯಕ ಆರ್. ಅಶೋಕ್ ಅವರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ನನ್ನ ಮೇಲೆ ನಾಲ್ಕೈದು ಮೊಟ್ಟೆಗಳನ್ನು ಎಸೆದರು. ಕೆಪಿಸಿಸಿ ಕಚೇರಿ ಮುಂದೆ ಕಾರು ನಿಲ್ಲಿಸಿ ಹಲ್ಲೆಗೆ ಯತ್ನಿಸಿದರು. ಬಳಿಕ ಪೊಲೀಸರು ನನ್ನನ್ನು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕರೆದೊಯ್ಯುವ ವೇಳೆ ಸೂಕ್ತ ಭದ್ರತೆ ಒದಗಿಸಿ ಸುರಕ್ಷಿತವಾಗಿ ಕರೆದುಕೊಂಡು ಹೋದರು” ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೊ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ತನಿಖೆ ಮುಂದುವರಿಸಿದ್ದಾರೆ.



