No menu items!
31.5 C
Munich
Saturday, July 25, 2026

ಸರ್ಕಾರದ ಭರವಸೆಗೆ ಮಣಿದ ಸಿಜೆಪಿ: ನೀಟ್ ಪೇಪರ್ ಲೀಕ್ ಪ್ರತಿಭಟನೆ ವಾಪಸ್, ಪ್ರತಿಭಟನಾಕಾರರಿಗೆ ಮನೆಗೆ ಮರಳುವಂತೆ ಮನವಿ

Must read

ಸರ್ಕಾರದ ಭರವಸೆಗೆ ಮಣಿದ ಸಿಜೆಪಿ: ನೀಟ್ ಪೇಪರ್ ಲೀಕ್ ಪ್ರತಿಭಟನೆ ವಾಪಸ್, ಪ್ರತಿಭಟನಾಕಾರರಿಗೆ ಮನೆಗೆ ಮರಳುವಂತೆ ಮನವಿ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ, ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ಸುದೀರ್ಘ ಪ್ರತಿಭಟನೆಯನ್ನು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ತಕ್ಷಣದಿಂದಲೇ ಹಿಂಪಡೆದಿದೆ. ಜೊತೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಬೆಂಬಲಿಗರು ಶಾಂತಿಯುತವಾಗಿ ತಮ್ಮ ಮನೆಗಳಿಗೆ ಮರಳುವಂತೆ ಪಕ್ಷ ಮನವಿ ಮಾಡಿದೆ.
ಶನಿವಾರ ಸಂಜೆ ಕೇಂದ್ರ ಸರ್ಕಾರ ಹಾಗೂ ಸಿಜೆಪಿ ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಯಿತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸಿಜೆಪಿಯ ಪ್ರಮುಖ ಬೇಡಿಕೆಯಾಗಿದ್ದು, ಅದು ಈಡೇರಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಳಿಸುವುದಾಗಿ ಪಕ್ಷ ಘೋಷಿಸಿದೆ.
ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಜೆಪಿ ವಕ್ತಾರರಾದ ಸೌರವ್ ದಾಸ್ ಹಾಗೂ ಅಶುತೋಷ್ ರಾಂಕಾ, “ಕೇಂದ್ರ ಸರ್ಕಾರ ನೀಡಿರುವ ಭರವಸೆಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿ ಪ್ರತಿಭಟನೆಯನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.
ಸರ್ಕಾರವು ತಮ್ಮ ಉಳಿದ ಬೇಡಿಕೆಗಳಿಗೂ ಸಕಾರಾತ್ಮಕ ಸ್ಪಂದನೆ ನೀಡಿದೆ ಎಂದು ಸಿಜೆಪಿ ವಕ್ತಾರರು ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು, ಮುಂದಿನ ದಿನಗಳಲ್ಲಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ನಿಯಮಾನುಸಾರ ಗರಿಷ್ಠ ಪರಿಹಾರ ನೀಡುವ ಭರವಸೆಯನ್ನು ಸರ್ಕಾರ ನೀಡಿದೆ ಎಂದು ಅವರು ಹೇಳಿದ್ದಾರೆ.
“ನಮ್ಮ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಹೀಗಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಎಲ್ಲರೂ ಶಾಂತಿಯುತವಾಗಿ ತಮ್ಮ ಮನೆಗಳಿಗೆ ಮರಳಬೇಕು” ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ ಶನಿವಾರ ಮಧ್ಯಾಹ್ನ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ರಾಷ್ಟ್ರವಿರೋಧಿ ಶಕ್ತಿಗಳು ದುರ್ಬಳಕೆ ಮಾಡಿಕೊಳ್ಳದಂತೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ತಮ್ಮ ಎಕ್ಸ್ (X) ಖಾತೆಯಲ್ಲಿ ರಾಜೀನಾಮೆ ಪತ್ರ ಹಂಚಿಕೊಂಡಿರುವ ಧರ್ಮೇಂದ್ರ ಪ್ರಧಾನ್, “ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಯನ್ನು ರಾಷ್ಟ್ರವಿರೋಧಿ ಶಕ್ತಿಗಳು ದುರ್ಬಳಕೆ ಮಾಡಿಕೊಳ್ಳಬಾರದು. ದೇಶದ ಏಕತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಬಾರದು ಎಂಬ ಉದ್ದೇಶದಿಂದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ನನ್ನ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article