No menu items!
27.6 C
Munich
Tuesday, July 28, 2026

ಮೇಕೆದಾಟು ವಿಚಾರದಲ್ಲಿ ಕರ್ನಾಟಕದ ವಿರುದ್ಧ ತಮಿಳುನಾಡು ಸರ್ಕಾರದ ಆಕ್ಷೇಪ! ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ವಿಜಯ್

Must read

ಮೇಕೆದಾಟು ವಿಚಾರದಲ್ಲಿ ಕರ್ನಾಟಕದ ವಿರುದ್ಧ ತಮಿಳುನಾಡು ಸರ್ಕಾರದ ಆಕ್ಷೇಪ! ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ವಿಜಯ್

ಚೆನ್ನೈ: ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ನೀಡಿರುವ ಹೇಳಿಕೆಗೆ ತಮಿಳುನಾಡು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ತಮಿಳುನಾಡು ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಚಿವರು, “ಕರ್ನಾಟಕ ತನ್ನ ಗಡಿಯೊಳಗೆ ನೀರು ಬಳಕೆ ಮಾಡುವ ಹಕ್ಕು ಹೊಂದಿದೆ. ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಪಡೆಯಬೇಕು ಎಂದು ಎಲ್ಲಿಯೂ ಹೇಳಿಲ್ಲ” ಎಂದು ತಿಳಿಸಿದ್ದರು.
ಈ ಹೇಳಿಕೆಯನ್ನು ವಿರೋಧಿಸಿರುವ ವಿಜಯ್, ಮೇಕೆದಾಟು ಯೋಜನೆಯಿಂದ ಕೆಳಭಾಗದ ರಾಜ್ಯವಾದ ತಮಿಳುನಾಡಿನ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ, ಕೇಂದ್ರ ಜಲಶಕ್ತಿ ಸಚಿವಾಲಯದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ವಿಜಯ್, ಕೆಳಭಾಗದ ರಾಜ್ಯಗಳ ಸ್ಪಷ್ಟ ಒಪ್ಪಿಗೆ ಇಲ್ಲದೆ ಯಾವುದೇ ಮೇಲ್ಭಾಗದ ರಾಜ್ಯವು ಹೊಸ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ವಾದಿಸಿದ್ದಾರೆ.
ಆಲಮಟ್ಟಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿರುವ ಅವರು, ಕಾವೇರಿ ನೀರು ವಿವಾದ ನ್ಯಾಯಾಧಿಕರಣದ ಅಂತಿಮ ಆದೇಶ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ನಿಯಮಗಳಿಗೆ ಕರ್ನಾಟಕದ ಮೇಕೆದಾಟು ಯೋಜನೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಕಾವೇರಿ ನ್ಯಾಯಾಧಿಕರಣದ ನಿಯಮಗಳ ಪ್ರಕಾರ, ನದಿ ಜಲಾನಯನ ಪ್ರದೇಶದಲ್ಲಿರುವ ಸಹ-ರಾಜ್ಯಗಳ ನಡುವೆ ಪರಸ್ಪರ ಒಪ್ಪಿಗೆ ಅಗತ್ಯವಿದೆ. ಮೇಕೆದಾಟು ಯೋಜನೆಯನ್ನು ಕೇವಲ ಕುಡಿಯುವ ನೀರು ಅಥವಾ ಇಂಜಿನಿಯರಿಂಗ್ ಯೋಜನೆಯಾಗಿ ಪರಿಗಣಿಸಬಾರದು. ಇದು ಲಕ್ಷಾಂತರ ರೈತರ ಜೀವನಾಧಾರವಾಗಿರುವ ಕಾವೇರಿ ನೀರಿನ ಹಂಚಿಕೆ ವಿಚಾರವಾಗಿದೆ ಎಂದು ವಿಜಯ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
2019ರಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ (DPR)ಯನ್ನು ಕೇಂದ್ರ ಜಲ ಆಯೋಗವು ನಿಯಮಗಳಿಗೆ ಅನುಗುಣವಾಗಿಲ್ಲ ಎಂಬ ಕಾರಣಕ್ಕೆ ವಾಪಸ್ ಕಳುಹಿಸಿದ್ದನ್ನು ತಮಿಳುನಾಡು ಸಿಎಂ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
ಇದೇ ವೇಳೆ, ಪಂಬಾರ್ ಜಲವಿದ್ಯುತ್ ಯೋಜನೆಯ ತೀರ್ಪನ್ನು ಉಲ್ಲೇಖಿಸಿರುವ ವಿಜಯ್, ಯಾವುದೇ ಏಕಪಕ್ಷೀಯ ನಿರ್ಧಾರದಿಂದ ತಮಿಳುನಾಡಿನ ಕೃಷಿ ಹಾಗೂ ನೀರಾವರಿ ವ್ಯವಸ್ಥೆಗೆ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕಾವೇರಿ ನ್ಯಾಯಾಧಿಕರಣದ ಆದೇಶ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಬೇಕು. ಕರ್ನಾಟಕ ಸಲ್ಲಿಸಿರುವ ಮೇಕೆದಾಟು ಯೋಜನೆಯ ಡಿಪಿಆರ್ಗೆ ಯಾವುದೇ ಕಾರಣಕ್ಕೂ ಅನುಮತಿ ನೀಡದಂತೆ ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ನಿರ್ದೇಶನ ನೀಡಬೇಕು ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article