ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ; ಹಾರಂಗಿ ಜಲಾಶಯದಿಂದ 5,365 ಕ್ಯೂಸೆಕ್ ನೀರು ಕಾವೇರಿಗೆ ಬಿಡುಗಡೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 5,365 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಬುಧವಾರದಿಂದ ಜಿಲ್ಲೆಯಾದ್ಯಂತ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿದ್ದು, ನದಿ, ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ.
ಪ್ರಸ್ತುತ ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಕ್ಕೆ 4,613 ಕ್ಯೂಸೆಕ್ ನೀರು ಒಳಹರಿವಾಗಿ ಬರುತ್ತಿದೆ. ಜಲಾಶಯದ ನೀರಿನ ಮಟ್ಟ ನಿಯಂತ್ರಣಕ್ಕಾಗಿ 5,365 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ.
ನಿರಂತರ ಮಳೆಯಿಂದಾಗಿ ಕಾವೇರಿ ನದಿಯ ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದ್ದು, ನದಿ ಪಾತ್ರದ ಸಮೀಪ ವಾಸಿಸುವ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ನದಿ-ಹಳ್ಳಗಳ ಸಮೀಪ ಅನಗತ್ಯವಾಗಿ ತೆರಳದಂತೆ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.



