No menu items!
29 C
Munich
Saturday, August 8, 2026

ಬಿ. ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಆರ್ಎಸ್ ಪ್ರತಿಭಟನೆ

Must read

ಬಿ. ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಆರ್ಎಸ್ ಪ್ರತಿಭಟನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಣದ ದುರುಪಯೋಗಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಕೆಆರ್ಎಸ್ ರಾಜ್ಯ ಕಾರ್ಯಾಧ್ಯಕ್ಷ ರಘು ಜಾಣಗೆರೆ, ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಮೀಸಲಾಗಿದ್ದ ಹಣದ ದುರುಪಯೋಗದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಪರ ಧೋರಣೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.
ED, CBI ಹಾಗೂ SIT ತನಿಖೆ ನಡೆಸಿರುವ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ನೈತಿಕವಾಗಿ ಖಂಡನೀಯ ಎಂದು ಅವರು ಹೇಳಿದರು. ನಾಗೇಂದ್ರ ಅವರು ಜಾಮೀನಿನ ಮೇಲೆ ಹೊರಗಿದ್ದು, ನ್ಯಾಯಾಲಯದ ಷರತ್ತುಗಳಿಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ, ಪ್ರಕರಣದ ವಿಚಾರಣೆ ಪೂರ್ಣಗೊಂಡು ಅಂತಿಮ ತೀರ್ಪು ಬರುವವರೆಗೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಕೆಆರ್ಎಸ್ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ಮಾಧ್ಯಮ ಸಂಯೋಜಕ ಎಲ್. ಜೀವನ್ ಮಾತನಾಡಿ, ವಾಲ್ಮೀಕಿ ನಿಗಮದ ಹಣ ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಾಗಿತ್ತು. ಸಾರ್ವಜನಿಕ ಹಣದ ದುರುಪಯೋಗದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದು ರಾಜ್ಯದ ಜನತೆಗೆ ಮಾಡಿದ ಅನ್ಯಾಯ ಎಂದು ಟೀಕಿಸಿದರು.
2024ರಲ್ಲೇ ಬಿ. ನಾಗೇಂದ್ರ ಅವರ ವಿರುದ್ಧ ಕೆಆರ್ಎಸ್ ಪಕ್ಷವು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿ, ಪ್ರಕರಣದ ತನಿಖೆಗೆ ಒತ್ತಾಯಿಸಿತ್ತು. ಪಕ್ಷದ ಹೋರಾಟದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಮತ್ತೆ ಅವರನ್ನು ಸಂಪುಟಕ್ಕೆ ಸೇರಿಸಿರುವುದು ಖಂಡನೀಯ ಎಂದು ಜೀವನ್ ಹೇಳಿದರು.
ಕೆಆರ್ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್ ಮಾತನಾಡಿ, 2024ರಲ್ಲಿ ಬಿ. ನಾಗೇಂದ್ರ ವಿರುದ್ಧ EDಗೆ ದೂರು ನೀಡಿದ್ದು ಕೆಆರ್ಎಸ್ ಪಕ್ಷವೇ ಎಂದು ಹೇಳಿದರು. ನಮ್ಮ ದೂರಿನ ಹಿನ್ನೆಲೆಯಲ್ಲಿ ತನಿಖೆ ಮುಂದುವರಿದು ನಾಗೇಂದ್ರ ಅವರು ಬಂಧನಕ್ಕೊಳಗಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕರ್ನಾಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸದಿದ್ದರೆ, ಮುತ್ತಿಗೆ ಹಾಕಿ ಕಪ್ಪುಪಟ್ಟಿ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸುವುದಾಗಿ ರಘುಪತಿ ಭಟ್ ಎಚ್ಚರಿಕೆ ನೀಡಿದರು.
ಪ್ರಕರಣದ ವಿಚಾರಣೆ ಪೂರ್ಣಗೊಂಡು ಅಂತಿಮ ತೀರ್ಪು ಬರುವವರೆಗೆ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಸರ್ಕಾರ ಬೇಡಿಕೆಯನ್ನು ನಿರ್ಲಕ್ಷಿಸಿದರೆ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಕೆಆರ್ಎಸ್ ನಾಯಕರು ಎಚ್ಚರಿಸಿದರು.

- Advertisement -spot_img

More articles

- Advertisement -spot_img

Latest article