ನಾನು ಸೈಲೆಂಟ್ ಆಗಿಲ್ಲ, ಹೆಚ್ಚು ಮಾತನಾಡುತ್ತಿಲ್ಲ ಅಷ್ಟೇ: ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೆಚ್ಚು ಹೇಳಿಕೆ ನೀಡದೆ ಸೈಲೆಂಟ್ ಆಗಿದ್ದಾರೆ ಎಂಬ ಚರ್ಚೆ ನಡೆಯುತ್ತಿರುವ ನಡುವೆ, ಈ ಕುರಿತು ಸ್ವತಃ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇಂದು ಮಾಧ್ಯಮ ಪ್ರತಿನಿಧಿಗಳು ಸಿದ್ದರಾಮಯ್ಯ ಅವರನ್ನು ಮಾತನಾಡಿಸಲು ಪ್ರಯತ್ನಿಸಿದಾಗ, ‘ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ? ನಾನು ಹೆಚ್ಚು ಮಾತನಾಡುತ್ತಿಲ್ಲ ಅಷ್ಟೇ’ ಎಂದು ಪ್ರತಿಕ್ರಿಯಿಸಿದರು.
‘ನಾನು ಈಗ ಮುಖ್ಯಮಂತ್ರಿ ಅಲ್ಲ, ಹಾಗಾಗಿ ಆ ಜವಾಬ್ದಾರಿ ನನ್ನ ಮೇಲಿಲ್ಲ. ನಿನ್ನೆ ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗಿದ್ದೇನೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಕೋಟಾ ಭರ್ತಿಯಾಗಿಲ್ಲ ಎಂಬ ಬಿಜೆಪಿ ನಾಯಕರ ಆರೋಪಕ್ಕೂ ಸಿದ್ದರಾಮಯ್ಯ ತಿರುಗೇಟು ನೀಡಿದರು.
‘ಬಿಜೆಪಿಯವರಿಗೆ ಯಾವ ನೈತಿಕತೆ ಇದೆ? ಅವರ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿಲ್ಲ’ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ತಾವು ಹೇಳಿದ್ದೇನೆ ಎಂದು ತಿಳಿಸಿದರು.
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಕುರಿತು ತಾವು ಈಗಾಗಲೇ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.



