No menu items!
20.9 C
Munich
Friday, August 21, 2026

400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಸಾಹುಕಾರ್ ಜಾನಕಿ ಇನ್ನಿಲ್ಲ!

Must read

400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಸಾಹುಕಾರ್ ಜಾನಕಿ ಇನ್ನಿಲ್ಲ!

ದಕ್ಷಿಣ ಭಾರತೀಯ ಚಿತ್ರರಂಗದ ಹಿರಿಯ ನಟಿ ಸಾಹುಕಾರ್ ಜಾನಕಿ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ, ಆಗಸ್ಟ್ 21ರಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಸಾಹುಕಾರ್ ಜಾನಕಿ ಅವರನ್ನು ಚೆನ್ನೈನ ಆಳ್ವಾರ್ಪೇಟೆಯ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ 1.59ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ನಟರ ಸಂಘದ ಅಧ್ಯಕ್ಷ ನಾಸರ್ ತಿಳಿಸಿದ್ದಾರೆ.
ಸಾಹುಕಾರ್ ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರು ಹಾಗೂ ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ಚೆನ್ನೈನ ತೇನಾಂಪೇಟೆಯ ಸೇಂಟೋಫ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಶುಕ್ರವಾರ ಸಂಜೆ 5 ಗಂಟೆಯಿಂದ ಇರಿಸಲಾಗುವುದು ಎಂದು ನಾಸರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯ ನಟಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಹ ಕಲಾವಿದರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.
ಸಾಹುಕಾರ್ ಜಾನಕಿ ಅವರು 1950ರಲ್ಲಿ ಎಲ್.ವಿ. ಪ್ರಸಾದ್ ನಿರ್ದೇಶನದ ತೆಲುಗಿನ ‘ಸಾಹುಕಾರು’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಈ ಸಿನಿಮಾ ಭರ್ಜರಿ ಯಶಸ್ಸು ಕಂಡ ಬಳಿಕ ಅವರ ಹೆಸರಿನ ಮುಂದೆ ‘ಸಾಹುಕಾರ್’ ಎಂಬ ಬಿರುದು ಶಾಶ್ವತವಾಗಿ ಉಳಿಯಿತು.
1952ರಲ್ಲಿ ಬಿಡುಗಡೆಯಾದ ‘ವಳಯಾಪತಿ’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟ ಅವರು, ಬಳಿಕ ದಕ್ಷಿಣ ಭಾರತದ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು.
ಸಾಹುಕಾರ್ ಜಾನಕಿ ಅವರ ಕನ್ನಡ ಚಿತ್ರರಂಗದ ಕೊಡುಗೆಯೂ ಅಪಾರವಾಗಿದೆ. 1954ರಲ್ಲಿ ಬಿಡುಗಡೆಯಾದ ‘ದೇವಕನ್ನಿಕಾ’ ಚಿತ್ರದ ಮೂಲಕ ಅವರು ಚಂದನವನ ಪ್ರವೇಶಿಸಿದರು.
1959ರಲ್ಲಿ ಡಾ. ರಾಜ್ಕುಮಾರ್ ಅವರೊಂದಿಗೆ ನಟಿಸಿದ ‘ಮಹಿಷಾಸುರ ಮರ್ದಿನಿ’ ಸಿನಿಮಾ ಸಾಹುಕಾರ್ ಜಾನಕಿ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿತ್ತು.
ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಷೆಗಳಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು, ತಮ್ಮ ವಿಭಿನ್ನ ಪಾತ್ರಗಳು ಹಾಗೂ ಅದ್ಭುತ ಅಭಿನಯದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದರು.
ಸಾಹುಕಾರ್ ಜಾನಕಿ ಅವರ ಸುದೀರ್ಘ ಕಲಾ ಸೇವೆಯನ್ನು ಗುರುತಿಸಿದ ಭಾರತ ಸರ್ಕಾರ 2022ರಲ್ಲಿ ದೇಶದ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು.
ದಶಕಗಳ ಕಾಲ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಹಿರಿಯ ನಟಿಯ ಅಗಲಿಕೆಯಿಂದ ಚಿತ್ರರಂಗ ಮತ್ತೊಬ್ಬ ಹಿರಿಯ ಕಲಾವಿದೆಯನ್ನು ಕಳೆದುಕೊಂಡಂತಾಗಿದೆ. ಸಾಹುಕಾರ್ ಜಾನಕಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

- Advertisement -spot_img

More articles

- Advertisement -spot_img

Latest article