ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ..!
ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಅಗ್ರ ಕೆರೆಗೆ ಹಾರಿ 22 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಯುವತಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಬೆಳಮಕ್ಕಿ ಮೂಲದ ವಾಣಿ ಎಂದು ಗುರುತಿಸಲಾಗಿದೆ.
ಸುಮಾರು ಒಂದು ವರ್ಷದ ಹಿಂದೆ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ವಾಣಿ, ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಾಲೇಜು ದಿನಗಳಲ್ಲಿ ವಾಣಿಯೊಂದಿಗೆ ಕ್ಲಾಸ್‌ಮೇಟ್ ಆಗಿದ್ದ ಅಭಿಷೇಕ್ ಎಂಬಾತನಿಂದ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಅಭಿಷೇಕ್ ವಾಟ್ಸಪ್‌ನಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಅಲ್ಲದೇ, ತಾನು ಕರೆದಾಗಲೆಲ್ಲಾ ರೂಮಿಗೆ ಬರಬೇಕು ಎಂದು ಮೆಸೇಜ್ ಮಾಡುತ್ತಿದ್ದ ಎಂದು ವಾಣಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಈ ಕಿರುಕುಳದಿಂದ ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದೇನೆ. ಅಭಿಷೇಕ್‌ಗೆ ಶಿಕ್ಷೆಯಾಗಬೇಕು ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಕುಟುಂಬಸ್ಥರು ತನ್ನನ್ನು ಮರೆಯಬಾರದು ಎಂಬ ಮಾತನ್ನೂ ಡೆತ್‌ನೋಟ್‌ನಲ್ಲಿ ಬರೆದಿಟ್ಟು ವಾಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಎಚ್‌ಎಸ್‌ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಭಿಷೇಕ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.



