RSS ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕರಣ: ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್ʼಗೆ ಜಾಮೀನು ಮಂಜೂರು
ಬೆಂಗಳೂರು: ಆರ್ಎಸ್ಎಸ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿದ್ದು, ತಲಾ 10 ಸಾವಿರ ರೂಪಾಯಿ ವೈಯಕ್ತಿಕ ಶ್ಯೂರಿಟಿ ನೀಡುವಂತೆ ಸೂಚಿಸಿದೆ.
ತೇಜಸ್ ಗೌಡ ಎಂಬುವವರು ಈ ಸಂಬಂಧ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.
ಈ ಹಿಂದೆ ನಡೆದ ವಿಚಾರಣೆ ವೇಳೆ ಇಬ್ಬರೂ ನಾಯಕರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ಪಡೆದಿದ್ದರು. ಆದರೆ, ಇಬ್ಬರೂ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.
ಇದರ ಬೆನ್ನಲ್ಲೇ ಸದಾಶಿವನಗರ ಹಾಗೂ ಅಶೋಕನಗರ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ಹಾಜರಾಗಿ ವರದಿ ಸಲ್ಲಿಸಿದ್ದರು. ಆದರೆ, ಪೊಲೀಸರು ಸಲ್ಲಿಸಿದ್ದ ವರದಿ ತೃಪ್ತಿಕರವಾಗಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.
ಹೀಗಾಗಿ, ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ಜಾರಿ ಮಾಡಲಾಗಿತ್ತು.
ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರಿಗೂ ತಲಾ 10 ಸಾವಿರ ರೂಪಾಯಿ ವೈಯಕ್ತಿಕ ಶ್ಯೂರಿಟಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ.



