ನಾಡಿನ ದೊರೆ ಎನ್ನುವ ಬದಲು ಪ್ರಜಾಸೇವಕ ಎಂದು ಕರೆದರೆ ಸಂತೋಷ: ಹೊಸ ವ್ಯವಸ್ಥೆಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
ವಿಜಯನಗರ: ರಾಜರ ಕಾಲ ಮುಗಿದು ಪ್ರಜಾಪ್ರಭುತ್ವದ ಯುಗ ಬಂದಿದೆ. ಹೀಗಾಗಿ ತಮ್ಮನ್ನು ‘ನಾಡಿನ ದೊರೆ’ ಎನ್ನುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ಅತ್ಯಂತ ಸಂತೋಷವಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೂಡ್ಲಿಗಿಯಲ್ಲಿ ಶನಿವಾರ ನೂತನ ‘ಪ್ರಜಾಸೇವಾ ಇಲಾಖೆ’ಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಜನಸೇವೆಯೇ ಜನಾರ್ದನ ಸೇವೆ’ ಎಂಬ ನಂಬಿಕೆಯಿಂದ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳು ಹಾಗೂ ಅಧಿಕಾರಿಗಳ ಬಳಿ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಿ, ಆಡಳಿತವನ್ನು ನೇರವಾಗಿ ಜನರ ಮನೆಬಾಗಿಲಿಗೆ ಕೊಂಡೊಯ್ಯುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ವಿಧಾನಸೌಧ, ಜಿಲ್ಲಾಧಿಕಾರಿ ಕಚೇರಿ ಅಥವಾ ತಾಲೂಕು ಕಚೇರಿಗಳಲ್ಲಿ ಕುಳಿತು ಜನರಿಂದ ದೂರವಿದ್ದು ಆಡಳಿತ ನಡೆಸುವುದು ಸರಿಯಲ್ಲ. ಪ್ರತಿಯೊಬ್ಬರಿಗೂ ಸಚಿವರು, ಶಾಸಕರು ಅಥವಾ ಅಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಧಿಕಾರಿಗಳೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳದಲ್ಲೇ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ‘ಪ್ರಜಾಸೇವಾ’ ವ್ಯವಸ್ಥೆ ಜಾರಿಯಾಗಲಿದೆ. ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಮಧ್ಯೆ ಇದ್ದು ಕಾರ್ಯನಿರ್ವಹಿಸುವಂತೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಚಿವರು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಮತ್ತು ಶಾಸಕರು ಪಂಚಾಯಿತಿ ಮಟ್ಟದಲ್ಲಿ ‘ಪ್ರಜಾಸೇವಾ’ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ. ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ಸಾಧ್ಯವಾದಷ್ಟು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ ಎಂದರು.
ಶಾಸಕರು ಕಾರ್ಯಕ್ರಮಕ್ಕೆ ಗೈರಾಗಿರುವ ಸಂದರ್ಭದಲ್ಲಿ ಅಧಿಕಾರಿಗಳೇ ಪಂಚಾಯಿತಿ ಕೇಂದ್ರಗಳಿಗೆ ತೆರಳಿ ಸಣ್ಣ ಸಭೆಗಳನ್ನು ನಡೆಸಬೇಕು. ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವುಗಳಿಗೆ ಸಾಧ್ಯವಾದಷ್ಟು ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.



