KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ʼಗೆ ಹೈಕೋರ್ಟ್ ಶಾಕ್; ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು: ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಪ್ರಕರಣದಲ್ಲಿ ತಮ್ಮನ್ನು ಬಂಧಿಸದಂತೆ ಕೋರಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರಾಜ್ಯ ಸರ್ಕಾರವು ಈಗಾಗಲೇ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿತ್ತು. ಇದೀಗ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಿಂದ ರಕ್ಷಣೆ ಕೋರಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಶಿವಶಂಕರಪ್ಪ ಸಾಹುಕಾರ್ ಪರ ವಕೀಲ ಅರುಣ್ ಶಾಮ್ ಅವರು, ತಮ್ಮ ಕಕ್ಷಿದಾರರನ್ನು ಪ್ರಕರಣದಲ್ಲಿ ಸಿಲುಕಿಸುವ ಯಾವುದೇ ನೇರ ದಾಖಲೆಗಳಿಲ್ಲ ಎಂದು ವಾದಿಸಿದರು.
ಪ್ರಕರಣದ ಪರೀಕ್ಷಾ ನಿಯಂತ್ರಕರು ಹಾಗೂ ಕಿಂಗ್ಪಿನ್ ಅನ್ನು ಈಗಾಗಲೇ ಬಂಧಿಸಲಾಗಿದೆ. ಜಾರಿ ನಿರ್ದೇಶನಾಲಯದ ತನಿಖೆಯಲ್ಲೂ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಯಾವುದೇ ಮಹತ್ವದ ಅಂಶ ಪತ್ತೆಯಾಗಿಲ್ಲ. ಅವರ ಮೊಬೈಲ್ ಫೋನ್ ಮಾತ್ರ ಜಪ್ತಿ ಮಾಡಲಾಗಿದೆ. ಇದನ್ನು ಹೊರತುಪಡಿಸಿ ಅವರಿಂದ ಯಾವುದೇ ವಸ್ತುಗಳನ್ನು ಜಪ್ತಿ ಮಾಡಿಲ್ಲ ಎಂದು ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.
ಇದೇ ವೇಳೆ, ಕೆಪಿಎಸ್ಸಿಯಿಂದ ಪೊಲೀಸರು ಒಎಂಆರ್ ಶೀಟ್ಗಳನ್ನು ಜಪ್ತಿ ಮಾಡಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ವಕೀಲರು ತಿಳಿಸಿದರು. ಇದನ್ನು ಹೊರತುಪಡಿಸಿ ಸಾಹುಕಾರ್ ವಿರುದ್ಧ ಬೇರೆ ಯಾವುದೇ ಪ್ರಕರಣವಿದೆಯೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಅರುಣ್ ಶಾಮ್, ಇದನ್ನು ಹೊರತುಪಡಿಸಿ ಯಾವುದೇ ಪ್ರಕರಣವಿಲ್ಲ ಎಂದು ವಾದಿಸಿದರು.
ಆದರೆ ಶಿವಶಂಕರಪ್ಪ ಸಾಹುಕಾರ್ ಪರ ವಾದಕ್ಕೆ ಸರ್ಕಾರಿ ವಕೀಲ ಎನ್. ಜಗದೀಶ್ ಆಕ್ಷೇಪ ವ್ಯಕ್ತಪಡಿಸಿದರು. ಸಾಹುಕಾರ್ ಅವರು ಕುಟುಂಬ ಸದಸ್ಯರಿಗೆ ಮಾತ್ರವಲ್ಲದೆ ಇತರರಿಗೂ ಕೆಲಸ ಕೊಡಿಸಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದರು.
‘ಶಿವಶಂಕರಪ್ಪ ಸಾಹುಕಾರ್ ಅವರನ್ನು ಬಂಧಿಸಲೇಬೇಕು ಎಂಬ ಪರಿಸ್ಥಿತಿ ಇದ್ದಿದ್ದರೆ, ಇಷ್ಟೊತ್ತಿಗಾಗಲೇ ಬಂಧಿಸುತ್ತಿದ್ದೆವು. ಆದರೆ ಅವರ ವಿರುದ್ಧದ ದಾಖಲೆಗಳನ್ನು ತನಿಖಾ ಸಂಸ್ಥೆಗಳು ಸಂಗ್ರಹಿಸುತ್ತಿವೆ’ ಎಂದು ಸರ್ಕಾರಿ ಪರ ವಕೀಲರು ವಾದಿಸಿದರು.
ಅಲ್ಲದೆ, ಕೆಪಿಎಸ್ಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರು ತಮ್ಮ ಕಚೇರಿಯನ್ನು ಪುತ್ರ ಹಾಗೂ ಪುತ್ರಿಯರು ಸೇರಿದಂತೆ ಇತರರ ಬಳಕೆಗೆ ಅವಕಾಶ ಮಾಡಿಕೊಟ್ಟಿದ್ದರು ಎಂಬ ಅಂಶವನ್ನೂ ವಿಶೇಷ ಸರ್ಕಾರಿ ಅಭಿಯೋಜಕರು ನ್ಯಾಯಪೀಠದ ಮುಂದೆ ಪ್ರಸ್ತಾಪಿಸಿದರು.
ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠವು ಶಿವಶಂಕರಪ್ಪ ಸಾಹುಕಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಇದರಿಂದಾಗಿ ಕೆಳ ನ್ಯಾಯಾಲಯದ ಬಳಿಕ ಇದೀಗ ಹೈಕೋರ್ಟ್ನಲ್ಲೂ ನಿರೀಕ್ಷಣಾ ಜಾಮೀನು ಸಿಗದಂತಾಗಿದೆ. ಹೀಗಾಗಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ಪ್ರಕರಣದಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಬಂಧನದ ಭೀತಿ ಎದುರಾಗಿದೆ.



