No menu items!
17.7 C
Munich
Wednesday, September 9, 2026

ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಬೆಳಂಬೆಳಗ್ಗೆ ED ಶಾಕ್; ದಾಖಲೆಗಳು, ಆಸ್ತಿ ಪತ್ರಗಳ ಪರಿಶೀಲನೆ

Must read

ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಬೆಳಂಬೆಳಗ್ಗೆ ED ಶಾಕ್; ದಾಖಲೆಗಳು, ಆಸ್ತಿ ಪತ್ರಗಳ ಪರಿಶೀಲನೆ

ಬೆಂಗಳೂರು: ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಎರಡು ಪ್ರತ್ಯೇಕ ಕಾರುಗಳಲ್ಲಿ ಆಗಮಿಸಿದ ಅಧಿಕಾರಿಗಳ ತಂಡ ಸಚಿವರ ನಿವಾಸಕ್ಕೆ ಪ್ರವೇಶಿಸಿ ಪರಿಶೀಲನೆ ಆರಂಭಿಸಿದೆ.
ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು, ಬಾರ್ ಲೈಸೆನ್ಸ್ ವಿತರಣೆಯಲ್ಲಿ ಭ್ರಷ್ಟಾಚಾರದ ಆರೋಪಗಳು ಹಾಗೂ ಹವಾಲಾ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಈ ಶೋಧ ನಡೆಯುತ್ತಿದೆ ಎನ್ನಲಾಗಿದೆ. ಸಚಿವರ ನಿವಾಸದಲ್ಲಿರುವ ಪ್ರಮುಖ ದಾಖಲೆಗಳು, ಆಸ್ತಿ ಪತ್ರಗಳು ಹಾಗೂ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ತನಿಖೆಯ ವೇಳೆ ಮಹತ್ವದ ದಾಖಲೆಗಳು ಅಥವಾ ಸಾಕ್ಷ್ಯಗಳು ದೊರೆತರೆ ಅವುಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯೂ ಇದೆ.
ಈ ಹಿಂದೆ ಜೂನ್ ತಿಂಗಳಲ್ಲಿ ಬೆಳಗಾವಿ ವಿಭಾಗದ ಅಬಕಾರಿ ಹೆಚ್ಚುವರಿ ಆಯುಕ್ತರಾಗಿದ್ದ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಅಥಣಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ED ಅಧಿಕಾರಿಗಳು ದಾಳಿ ನಡೆಸಿದ್ದರು. ಬಾರ್ ಲೈಸೆನ್ಸ್ ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಡೆದಿದ್ದ ಈ ಕಾರ್ಯಾಚರಣೆಯಲ್ಲಿ ಮಂಜುನಾಥ್ ಅವರ ನಿವಾಸದಲ್ಲಿ ನೂರಾರು ಬೇನಾಮಿ ಬಾರ್ ಲೈಸೆನ್ಸ್ಗಳು, ₹5.5 ಲಕ್ಷ ನಗದು ಹಾಗೂ ಸುಮಾರು ₹13.3 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿತ್ತು ಎಂದು ವರದಿಯಾಗಿತ್ತು.
ಮಂಜುನಾಥ್ ಅವರ ವಿರುದ್ಧದ ತನಿಖೆಯ ಮುಂದುವರಿದ ಭಾಗವಾಗಿ ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲೂ ಶೋಧ ನಡೆಯುತ್ತಿದೆ ಎನ್ನಲಾಗಿದೆ. ಅಬಕಾರಿ ಇಲಾಖೆಯಲ್ಲಿನ ಅಕ್ರಮ ಹಣಕಾಸು ವ್ಯವಹಾರಗಳು ಹಾಗೂ ಹವಾಲಾ ಜಾಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳು ಪತ್ತೆಯಾಗುತ್ತವೆಯೇ ಎಂಬುದರ ಕುರಿತು ED ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಸಚಿವರ ನಿವಾಸದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ED ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದೆ. ತನಿಖೆ ಪೂರ್ಣಗೊಂಡ ಬಳಿಕ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ.

- Advertisement -spot_img

More articles

- Advertisement -spot_img

Latest article