ಊರಿಗೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್; ಸೆ.11ರಿಂದ 2,400 ವಿಶೇಷ ಬಸ್ ಗಳು, ಬೆಂಗಳೂರಿನಲ್ಲಿ 240 BMTC ಬಸ್ ಗಳ ವ್ಯವಸ್ಥೆ
ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸ್ವಂತ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಪ್ರಯಾಣಿಕರ ದಟ್ಟಣೆ ಹೆಚ್ಚುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ 2,400 ವಿಶೇಷ ಬಸ್ಗಳನ್ನು ನಿಯೋಜಿಸಲಾಗಿದೆ.
ಹೆಚ್ಚುವರಿಯಾಗಿ 270 ರಿಸರ್ವೇಶನ್ ಬಸ್ಗಳನ್ನು ಸಿದ್ಧವಾಗಿರಿಸಲಾಗಿದ್ದು, ಬೆಂಗಳೂರಿನಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ 240 ಬಿಎಂಟಿಸಿ ಬಸ್ಗಳನ್ನು ಕಾರ್ಯಾಚರಣೆಗೆ ಸಿದ್ಧಪಡಿಸಲಾಗಿದೆ.
ಹಬ್ಬದ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ. ಮೆಜೆಸ್ಟಿಕ್, ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಬಸ್ ಸೇವೆಗಳನ್ನು ನಿರ್ವಹಿಸಲಾಗುತ್ತದೆ.
ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿದಂತೆ ಪ್ರಯಾಣಿಕರ ಬೇಡಿಕೆ ಹೆಚ್ಚಿರುವ ಹಲವು ಪ್ರಮುಖ ಮಾರ್ಗಗಳಿಗೆ ಹೆಚ್ಚುವರಿ ಬಸ್ಗಳನ್ನು ನಿಯೋಜಿಸಲಾಗಿದೆ.
ಈಗಾಗಲೇ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಸ್ವಂತ ಊರುಗಳಿಗೆ ತೆರಳಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬಸ್ ನಿಲ್ದಾಣಗಳತ್ತ ಆಗಮಿಸುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನು ಹಬ್ಬ ಮುಗಿದ ಬಳಿಕ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ವಾಪಸ್ ಆಗುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರಿಗಾಗಿ ಕೂಡ ಹೆಚ್ಚುವರಿ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ.



