ಮುಳ್ಳಯ್ಯನಗಿರಿ ಪ್ರವಾಸಕ್ಕೆ ತೆರಳುವವರಿಗೆ ಬಿಗ್ ಅಪ್ ಡೇಟ್; ಸೆಪ್ಟೆಂಬರ್ 14ರಂದು ಪ್ರವೇಶ ಸಂಪೂರ್ಣ ನಿರ್ಬಂಧ
ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರಸಿದ್ಧ ಗಿರಿಧಾಮಗಳಿಗೆ ಭೇಟಿ ನೀಡಲು ಯೋಜಿಸುತ್ತಿರುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಮುಳ್ಳಯ್ಯನಗಿರಿ ಸೇರಿದಂತೆ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಚೌತಿ ಹಬ್ಬದ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಶ್ರೀ ಗುರು ನಾರುಕಂತೆ ಮಠಗಳಿಗೆ ಹಣ್ಣು-ಕಾಯಿ ಮಾಡಿಸಲು ಮತ್ತು ಚೌತಿ ಕಾಯಿ ಹೊಡೆಯಲು ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.
ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಸಾಂಪ್ರದಾಯಿಕ ಆಚರಣೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಹಬ್ಬದ ದಿನದಂದು ಭಕ್ತರ ಜೊತೆಗೆ ಪ್ರವಾಸಿಗರ ವಾಹನಗಳ ದಟ್ಟಣೆಯೂ ಹೆಚ್ಚಾದರೆ ತೀವ್ರ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಹಾಗೂ ಭಕ್ತರ ಅನುಕೂಲಕ್ಕಾಗಿ ಪ್ರವಾಸಿಗರ ಪ್ರವೇಶಕ್ಕೆ ಒಂದು ದಿನ ನಿರ್ಬಂಧ ವಿಧಿಸಲಾಗಿದೆ.
ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಪ್ರದೇಶಗಳಿಗೆ ತೆರಳಲು ಯೋಜಿಸಿರುವ ಪ್ರವಾಸಿಗರು ಸೆಪ್ಟೆಂಬರ್ 14ರ ತಮ್ಮ ಪ್ರವಾಸವನ್ನು ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದ್ದಾರೆ.
ಹೀಗಾಗಿ ಗೌರಿ-ಗಣೇಶ ಹಬ್ಬದಂದು ಚಿಕ್ಕಮಗಳೂರಿನ ಗಿರಿಧಾಮಗಳಿಗೆ ಪ್ರವಾಸ ಕೈಗೊಳ್ಳುವವರು ಜಿಲ್ಲಾಡಳಿತದ ಈ ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರವಾಸದ ದಿನಾಂಕವನ್ನು ಬದಲಿಸಿಕೊಳ್ಳುವುದು ಸೂಕ್ತವಾಗಿದೆ.



