ವಂದೇ ಮಾತರಂ ಕುರಿತು ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಪಿಐಎಲ್
ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ವಕೀಲ ಗಿರೀಶ್ ಭಾರದ್ವಾಜ್ ಅವರು ಈ ಪಿಐಎಲ್ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.
ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಉಳಿದ ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ಸರ್ಕಾರ ಆದೇಶಿಸಿತ್ತು.
ರಾಷ್ಟ್ರೀಯ ಮಹತ್ವ ಹೊಂದಿರುವ ಗೀತೆಯೊಂದರ ಗಾಯನದ ಸ್ವರೂಪವನ್ನು ಕಾರ್ಯಕಾರಿ ಆದೇಶದ ಮೂಲಕ ರಾಜ್ಯ ಸರ್ಕಾರ ನಿರ್ಧರಿಸಲು ಅಥವಾ ಬದಲಾಯಿಸಲು ಅಧಿಕಾರವಿದೆಯೇ ಎಂಬುದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.
‘ವಂದೇ ಮಾತರಂ’ಗೆ ಸಂಬಂಧಿಸಿದ ನಿಯಮಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುತ್ತವೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಅಧಿಕೃತ ಆವೃತ್ತಿಯನ್ನು ಬದಲಾಯಿಸುವ ಅಧಿಕಾರವನ್ನು ಸಂವಿಧಾನದ 162ನೇ ವಿಧಿ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.
ಈ ಪಿಐಎಲ್ ಇಂದು ಮಧ್ಯಾಹ್ನ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.



