ರೈತರ ಭೂಮಿ, ಬದುಕು ರಕ್ಷಣೆ ಮಾಡಬೇಕಿದೆ; ಭಾವನೆ ಮೇಲಲ್ಲ, ಬದುಕಿನ ಮೇಲೆ ರಾಜಕಾರಣ ಮಾಡ್ತೇನೆ: CM ಡಿಕೆಶಿ
ಶಿವಮೊಗ್ಗ: ಕಸ್ತೂರಿರಂಗನ್ ವರದಿ ಕುರಿತು ವಿಧಾನಸೌಧದಲ್ಲಿ ಕುಳಿತು ಚರ್ಚೆ ನಡೆಸುವುದರಿಂದ ಪ್ರಯೋಜನವಿಲ್ಲ. ಈ ವಿಚಾರದಲ್ಲಿ ಜನರ ಅಭಿಪ್ರಾಯ ಮತ್ತು ರೈತರ ಸಮಸ್ಯೆಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ತೀರ್ಥಹಳ್ಳಿಗೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತೀರ್ಥಹಳ್ಳಿಯ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಕಸ್ತೂರಿರಂಗನ್ ವರದಿ ಕುರಿತ ನೇರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಭೂಮಿ ಮತ್ತು ಬದುಕಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. ಕಸ್ತೂರಿರಂಗನ್ ವರದಿ ವ್ಯಾಪ್ತಿಯ ಬಗ್ಗೆ ಜನರ ಆತಂಕಗಳನ್ನು ಆಲಿಸುವ ಉದ್ದೇಶದಿಂದ ತೀರ್ಥಹಳ್ಳಿಗೆ ಬಂದಿರುವುದಾಗಿ ತಿಳಿಸಿದ್ದಾರೆ.
“ಇದೊಂದು ವಿಶೇಷ ಅವಕಾಶ. ನಿಮ್ಮನ್ನು ಭೇಟಿ ಮಾಡಲು ಬಂದಿದ್ದೇನೆ. ರೈತರ ಸಮಸ್ಯೆ, ಬದುಕಿನ ಸಮಸ್ಯೆ ಎದುರಾಗಿದೆ. ರೈತರ ಭೂಮಿಯನ್ನು ರಕ್ಷಣೆ ಮಾಡಬೇಕಿದೆ. ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ ಅಭಿಪ್ರಾಯ ಕೇಳಿದೆ. ವಿಧಾನಸೌಧದಲ್ಲಿ ಕುಳಿತು ಈ ಬಗ್ಗೆ ಚರ್ಚೆ ಮಾಡಿದರೆ ಪ್ರಯೋಜನ ಆಗುವುದಿಲ್ಲ. ಅದಕ್ಕಾಗಿಯೇ ಇಲ್ಲಿಗೆ ಬಂದಿದ್ದೇನೆ. ಜೊತೆಗೆ ವಿಶೇಷ ಅಧಿವೇಶನವನ್ನೂ ಕರೆದಿದ್ದೇನೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
“ನಾನು ರೈತರನ್ನು ರಕ್ಷಣೆ ಮಾಡಲು ಇಲ್ಲಿಗೆ ಬಂದಿದ್ದೇನೆ. ಜನರ ಸಮಸ್ಯೆ ಬಗೆಹರಿಯುವುದು ಮುಖ್ಯ. ಬಹಳಷ್ಟು ಜನರು ಈ ಸಮಸ್ಯೆಯನ್ನು ಅಧ್ಯಯನ ಮಾಡಿದ್ದಾರೆ. ಜನರ ಭಾವನೆಗಳ ಮೇಲೆ ಸರ್ಕಾರ ನಡೆಯಬೇಕು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಜನರ ಅಭಿಪ್ರಾಯಗಳನ್ನು ಆಲಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ಹಿಂದೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲೂ ಸ್ಥಳೀಯರು ಮತ್ತು ವಿವಿಧ ಸಂಘಟನೆಗಳೊಂದಿಗೆ ಡಿಕೆ ಶಿವಕುಮಾರ್ ಸಂವಾದ ನಡೆಸಿ, ಜನರ ಆತಂಕಗಳನ್ನು ಅರ್ಥ ಮಾಡಿಕೊಂಡ ಬಳಿಕ ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಲುವು ತಿಳಿಸುವುದಾಗಿ ಹೇಳಿದ್ದರು.



