ಸ್ಟಿಂಗ್ ಆಪರೇಷನ್ ಗೆ ನೀವೇ ನೀರೆರೆದಿದ್ದೀರಿ, ಈಗ ಫಲ ಅನುಭವಿಸಿ: ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ವಾಗ್ದಾಳಿ!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಮಾಜಿ ಮುಖ್ಯಮಂತ್ರಿಯೊಬ್ಬರು ತಡೆಯಾಜ್ಞೆ ಪಡೆಯಲು ನ್ಯಾಯಾಲಯದ ಮೊರೆಹೋಗಿದ್ದಾರೆ ಎಂಬ ಮಾಹಿತಿ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸ್ಟಿಂಗ್ ಆಪರೇಷನ್ಗೆ ನೀವೇ ನೀರೆರೆದು ಬೆಳೆಸಿದ್ದೀರಿ. ಈಗ ಅದು ಹೆಮ್ಮರವಾಗಿದೆ. ಅದರ ಫಲವನ್ನೂ ನೀವೇ ಅನುಭವಿಸಬೇಕು ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಮಂಗಳವಾರ ಬೆಂಗಳೂರಿನ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ಬರಗಾಲ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಗಂಭೀರ ವಿಚಾರಗಳಿವೆ. ಕಬ್ಬು ಬೆಳೆಗಾರರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿಯಾಗುತ್ತಿದ್ದಾರೆ. ಆದರೆ ಈ ಎಲ್ಲ ಸಮಸ್ಯೆಗಳನ್ನು ಮೀರಿಸಿ ಸ್ಟಿಂಗ್ ಆಪರೇಷನ್ ವಿವಾದವೇ ಮುನ್ನೆಲೆಗೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 9ರಂದು ನೈಜ ಹೋರಾಟಗಾರರ ವೇದಿಕೆಯು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸ್ಟಿಂಗ್ ಆಪರೇಷನ್ ಕುರಿತು ದೂರು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯೊಬ್ಬರು ತಡೆಯಾಜ್ಞೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಅವರು ತಡೆಯಾಜ್ಞೆ ಪಡೆಯುವ ಬದಲು ಧೈರ್ಯವಾಗಿ ಸ್ಟಿಂಗ್ ಆಪರೇಷನ್ ಬಗ್ಗೆ ಧ್ವನಿ ಎತ್ತಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಇದೇ ವೇಳೆ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣವನ್ನೂ ಪ್ರಸ್ತಾಪಿಸಿದ ಕುಮಾರಸ್ವಾಮಿ, ಲೋಕಸಭಾ ಚುನಾವಣೆಗೂ ಮುನ್ನ ಹಾಸನ ಹಾಗೂ ಮಂಡ್ಯದಲ್ಲಿ ಪೆನ್ಡ್ರೈವ್ಗಳನ್ನು ಹಂಚಲಾಗಿತ್ತು. ಆ ಸಂದರ್ಭದಲ್ಲಿ ಮಹಿಳೆಯರ ಗೌಪ್ಯತೆಗೆ ಧಕ್ಕೆಯಾಯಿತು ಎಂದು ಆರೋಪಿಸಿದ್ದಾರೆ. ವಿಡಿಯೋಗಳಲ್ಲಿದ್ದ ಮಹಿಳೆಯರ ಮುಖಗಳನ್ನು ಮಸುಕುಗೊಳಿಸಬಹುದಿತ್ತು. ಆದರೆ ಹಾಗೆ ಮಾಡದೆ ಅವರ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ನೂರಾರು ಮಹಿಳೆಯರ ಮೇಲಿನ ದೌರ್ಜನ್ಯದ ಆರೋಪಗಳನ್ನು ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸಿದ್ದರು. ಆದರೆ ಪೆನ್ಡ್ರೈವ್ ಹಂಚಿದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಗಳನ್ನೂ ಪ್ರಸ್ತಾಪಿಸಿದ ಅವರು, ವಿಧಾನಸಭೆಯಲ್ಲಿ 48 ಜನರ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ರಾಜಣ್ಣ ಹೇಳಿದ್ದರು. ನಂತರ ಅವರ ಧ್ವನಿಯನ್ನೇ ಅಡಗಿಸಲಾಯಿತು ಎಂದು ಆರೋಪಿಸಿದ್ದಾರೆ. ಈಗ ಮಾಜಿ ಮುಖ್ಯಮಂತ್ರಿಯೊಬ್ಬರು ತಡೆಯಾಜ್ಞೆ ಪಡೆಯುವ ಪರಿಸ್ಥಿತಿ ಎದುರಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಸಾಧನೆಯೇ ಎಂದು ಪ್ರಶ್ನಿಸಿದ್ದಾರೆ.
ಹಿಂದೆ 17 ಶಾಸಕರನ್ನು ಮುಂಬೈಗೆ ಕಳುಹಿಸಿದ ಪ್ರಕರಣದ ಬಗ್ಗೆಯೂ ಮಾತನಾಡಿದ ಕುಮಾರಸ್ವಾಮಿ, ಅಂದು ಯಾರು ತಡೆಯಾಜ್ಞೆ ಪಡೆದಿದ್ದರು ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದಿದ್ದಾರೆ. ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಿಕೊಂಡು ನಡೆಸಿದರೆನ್ನಲಾದ ಇಂತಹ ಬೆಳವಣಿಗೆಗಳು ಈಗ ಕಾಂಗ್ರೆಸ್ ನಾಯಕರಿಗೇ ತಿರುಗುಬಾಣವಾಗಿವೆ ಎಂದು ಟೀಕಿಸಿದ್ದಾರೆ.



