ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕದ ರಾಜ್ಯಪಾಲರ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ಸೇರ್ಪಡೆಯಾಗಿದೆ. ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ (ಅಕ್ಟೋಬರ್ 16) ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಲೋಕಭವನದಲ್ಲಿ ಆಯೋಜಿಸಿದ್ದ ಅಧಿಕೃತ ಸಮಾರಂಭದಲ್ಲಿ ಅವರು ಕರ್ನಾಟಕದ 20ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನೂತನ ರಾಜ್ಯಪಾಲೆಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ನಿರ್ಗಮಿತ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆ
ಕರ್ನಾಟಕದಲ್ಲಿ ಈ ಹಿಂದೆ ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ಮೊದಲ ಮಹಿಳಾ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. ಅವರ ಬಳಿಕ ಇದೀಗ ಡಾ. ಸುಧಾ ಯಾದವ್ ರಾಜ್ಯಪಾಲರ ಹುದ್ದೆ ಅಲಂಕರಿಸಿರುವ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮಿಲಿಟರಿ ಸ್ಮಾರಕಕ್ಕೆ ಪುಷ್ಪನಮನ
ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಡಾ. ಸುಧಾ ಯಾದವ್ ಅವರು ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಬಳಿಕ ಲೋಕಭವನಕ್ಕೆ ತೆರಳಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡರು.
ನೂತನ ರಾಜ್ಯಪಾಲರ ಪ್ರಮಾಣ ವಚನ ಸಮಾರಂಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಗಣ್ಯರು ಭಾಗವಹಿಸಿದ್ದರು. ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿ ಸುಧಾ ಯಾದವ್ ಅವರು ತಮ್ಮ ಹೊಸ ಜವಾಬ್ದಾರಿಯನ್ನು ಆರಂಭಿಸಿದ್ದಾರೆ.



