ಸ್ಟಿಂಗ್ ವಿವಾದದ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಸಿಎಂ ಡಿಕೆಶಿ ಭೇಟಿ; 20 ನಿಮಿಷಕ್ಕೂ ಹೆಚ್ಚು ಕಾಲ ಮಹತ್ವದ ಮಾತುಕತೆ!
ಮೈಸೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿವಾದದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸ್ಟಿಂಗ್ ಪ್ರಕರಣ ಬೆಳಕಿಗೆ ಬಂದ ನಂತರ ಉಭಯ ನಾಯಕರ ನಡುವೆ ನಡೆದ ಮೊದಲ ಭೇಟಿ ಇದಾಗಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಮಂಡ್ಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೈಸೂರಿಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್, ನಗರದ ಕುವೆಂಪುನಗರದಲ್ಲಿರುವ ಸಿದ್ದರಾಮಯ್ಯ ಅವರ ನೂತನ ನಿವಾಸಕ್ಕೆ ತೆರಳಿದರು. ಈ ವೇಳೆ ಸಿದ್ದರಾಮಯ್ಯ ಅವರೊಂದಿಗೆ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ಬಹಿರಂಗಗೊಂಡ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋಗಳ ಪ್ರಸಾರಕ್ಕೆ ತಡೆ ನೀಡುವಂತೆ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇಂತಹ ರಾಜಕೀಯ ಬೆಳವಣಿಗೆಗಳ ನಡುವೆಯೇ ಸಿಎಂ ಡಿಕೆಶಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ. ಉಭಯ ನಾಯಕರ ನಡುವೆ ಯಾವ ವಿಚಾರಗಳ ಕುರಿತು ಚರ್ಚೆ ನಡೆದಿದೆ ಎಂಬುದು ಇನ್ನೂ ಅಧಿಕೃತವಾಗಿ ಬಹಿರಂಗವಾಗಿಲ್ಲ.
ಸ್ಟಿಂಗ್ ವಿವಾದದ ಕುರಿತು ಮಾತುಕತೆ ನಡೆದಿದೆಯೇ ಅಥವಾ ಇದೊಂದು ಸೌಜನ್ಯದ ಭೇಟಿಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.



