ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಎಸ್ಐಟಿ ತನಿಖೆ ಚುರುಕು! ಅಂದಿನ ತನಿಖಾಧಿಕಾರಿ ಯೋಗೇಶ್ ಗೆ ಎಸ್ ಐಟಿ ಬುಲಾವ್

Must read

ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಎಸ್ಐಟಿ ತನಿಖೆ ಚುರುಕು! ಅಂದಿನ ತನಿಖಾಧಿಕಾರಿ ಯೋಗೇಶ್ ಗೆ ಎಸ್ ಐಟಿ ಬುಲಾವ್

ಮಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. 2012ರಲ್ಲಿ ಪ್ರಕರಣದ ತನಿಖೆ ನಡೆಸಿದ್ದ ಅಂದಿನ ತನಿಖಾಧಿಕಾರಿ ಯೋಗೇಶ್ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಸೌಜನ್ಯ ಪ್ರಕರಣದ ಆರಂಭಿಕ ತನಿಖೆಯ ಸಂದರ್ಭದಲ್ಲಿ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಸಂಬಂಧ ಅಂದಿನ ತನಿಖಾಧಿಕಾರಿ ಯೋಗೇಶ್ ವಿರುದ್ಧ ಸೌಜನ್ಯ ಅವರ ಪೋಷಕರು ಹಲವು ಆರೋಪಗಳನ್ನು ಮಾಡಿದ್ದರು. ಇದೀಗ ಪ್ರಕರಣದ ಮರುತನಿಖೆ ಕೈಗೊಂಡಿರುವ ಎಸ್ಐಟಿ ಅಧಿಕಾರಿಗಳು ಯೋಗೇಶ್ ಅವರನ್ನು ವಿಚಾರಣೆಗೆ ಕರೆಯುವ ಮೂಲಕ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಯೋಗೇಶ್ ಅವರಿಗೆ ಈ ವಾರದೊಳಗೆ ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಪ್ರಕರಣದ ಆರಂಭಿಕ ತನಿಖೆ ಯಾವ ರೀತಿಯಲ್ಲಿ ನಡೆದಿತ್ತು, ಸಾಕ್ಷ್ಯಗಳ ಸಂಗ್ರಹ ಮತ್ತು ನಿರ್ವಹಣೆಯಲ್ಲಿ ಲೋಪಗಳಾಗಿದ್ದವೇ ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಪಡೆಯುವ ಸಾಧ್ಯತೆಯಿದೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠವು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶ ನೀಡಿತ್ತು. ಈ ಹಿಂದೆ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ ಯಾವುದೇ ಅಧಿಕಾರಿಯನ್ನು ಹೊಸ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬಾರದು ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
ಅಲ್ಲದೆ, ಮುಂದಿನ ಮೂರು ತಿಂಗಳೊಳಗೆ ಪ್ರಕರಣದ ಸಮಗ್ರ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗಡುವು ವಿಧಿಸಿತ್ತು. ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ ಮರುತನಿಖೆ ನಡೆಸುತ್ತಿರುವ ಎಸ್ಐಟಿ, ಹಿಂದಿನ ತನಿಖೆಯಲ್ಲಿನ ಲೋಪಗಳ ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಸುತ್ತಿದೆ.
ಇದೀಗ ಅಂದಿನ ತನಿಖಾಧಿಕಾರಿ ಯೋಗೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಯೋಗೇಶ್ ಅವರ ವಿಚಾರಣೆಯಿಂದ ಹಿಂದಿನ ತನಿಖೆಗೆ ಸಂಬಂಧಿಸಿದಂತೆ ಯಾವೆಲ್ಲ ಹೊಸ ಮಾಹಿತಿಗಳು ಹೊರಬರಲಿವೆ ಎಂಬುದು ಕುತೂಹಲ ಮೂಡಿಸಿದೆ.

- Advertisement -spot_img

More articles

- Advertisement -spot_img

Latest article