ಒಂದೇ ಕುಟುಂಬದ 7 ಜನರ ಹತ್ಯೆ ಪ್ರಕರಣ: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮತ್ತೆರಡು ಮೃತದೇಹ ಪತ್ತೆ!

Must read

ಒಂದೇ ಕುಟುಂಬದ 7 ಜನರ ಹತ್ಯೆ ಪ್ರಕರಣ: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮತ್ತೆರಡು ಮೃತದೇಹ ಪತ್ತೆ!

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಜನರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆರಡು ಮೃತದೇಹಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಶಿವಕುಮಾರ್ ಮತ್ತು ದಿವ್ಯಾ ದಂಪತಿಯ ಮೃತದೇಹಗಳು ಪತ್ತೆಯಾಗಿವೆ ಎನ್ನಲಾಗಿದೆ.
ಆರೋಪಿ ಇಂದುಶೇಖರ್ನನ್ನು ಸ್ಥಳಕ್ಕೆ ಕರೆದೊಯ್ದು ಪೊಲೀಸರು ಶವಗಳನ್ನು ಪತ್ತೆಹಚ್ಚಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆದಿದೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಈವರೆಗೆ ಐವರ ಮೃತದೇಹ ಪತ್ತೆ!
ಏಳು ಜನರ ಹತ್ಯೆ ಪ್ರಕರಣದಲ್ಲಿ ಈವರೆಗೆ ಐವರ ಮೃತದೇಹಗಳು ಪತ್ತೆಯಾಗಿವೆ. ಈ ಹಿಂದೆ ಏಳು ವರ್ಷದ ಬಾಲಕ ಪುನೀತ್ನ ಮೃತದೇಹ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿತ್ತು. ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿತ್ತು.
ಇದಾದ ಬಳಿಕ ಸೇಲಂನಲ್ಲಿ ಸುನೀತಾ ಮತ್ತು ರೂಪವತಿ ಅವರ ಮೃತದೇಹಗಳು ಪತ್ತೆಯಾಗಿದ್ದವು. ಇದೀಗ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಶಿವಕುಮಾರ್ ಮತ್ತು ದಿವ್ಯಾ ದಂಪತಿಯ ಮೃತದೇಹಗಳು ಪತ್ತೆಯಾಗಿವೆ. ನಾಲ್ವರು ಮೃತರ ಅಂತ್ಯಕ್ರಿಯೆಯನ್ನು ಒಂದೇ ಕಡೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನಿಬ್ಬರಿಗಾಗಿ ಪೊಲೀಸರ ಶೋಧ ಕಾರ್ಯ!
ಇನ್ನು ಹತ್ಯೆಯಾದ ಏಳು ಜನರ ಪೈಕಿ ಶಂಕರ್ ಮತ್ತು ನಳಿನಿ ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ. ಆರೋಪಿ ಇಂದುಶೇಖರ್ ನೀಡಿರುವ ಮಾಹಿತಿಯ ಪ್ರಕಾರ, ಇಬ್ಬರ ಮೃತದೇಹಗಳನ್ನು ಶಿರಾಡಿ ಘಾಟ್ನಲ್ಲಿ ಎಸೆಯಲಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಪಿಯ ಮಾಹಿತಿ ಆಧರಿಸಿ ಶಿರಾಡಿ ಘಾಟ್ ಪ್ರದೇಶದಲ್ಲಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಮತ್ತೊಂದೆಡೆ ಆರೋಪಿಯ ವಿಚಾರಣೆಯನ್ನೂ ತೀವ್ರಗೊಳಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಹತ್ವದ ಮಾಹಿತಿಗಳು ಹೊರಬರುವ ನಿರೀಕ್ಷೆಯಿದೆ.

- Advertisement -spot_img

More articles

- Advertisement -spot_img

Latest article