ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ: 28 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ, ₹24.14 ಕೋಟಿ ಆದಾಯ ಸಂಗ್ರಹ!

Must read

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ: 28 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ, ₹24.14 ಕೋಟಿ ಆದಾಯ ಸಂಗ್ರಹ!

ಹಾಸನ: ಈ ಬಾರಿಯ ಹಾಸನಾಂಬೆ ದೇವಿ ದರ್ಶನೋತ್ಸವಕ್ಕೆ ಭಕ್ತರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ದೇವಿಯ ದರ್ಶನ ಪಡೆದ ಭಕ್ತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಇಂದು ಬೆಳಗ್ಗೆ 6 ಗಂಟೆಯವರೆಗೆ ಬರೋಬ್ಬರಿ 28.72 ಲಕ್ಷ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದು, ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ 24.14 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ತಿಳಿಸಿದ್ದಾರೆ.
ಹಾಸನಾಂಬೆ ದರ್ಶನೋತ್ಸವದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸಿದ್ದಾರೆ. ಭಕ್ತರ ಅನುಕೂಲಕ್ಕಾಗಿ 1,000 ರೂ. ಹಾಗೂ 300 ರೂ. ವಿಶೇಷ ದರ್ಶನದ ಟಿಕೆಟ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಟಿಕೆಟ್ಗಳ ಮಾರಾಟ ಹಾಗೂ ಲಾಡು ಪ್ರಸಾದ ಮಾರಾಟದಿಂದ ಒಟ್ಟು 24.14 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಈ ಬಾರಿ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿರುವುದು ವಿಶೇಷವಾಗಿದೆ.
ಇನ್ನು ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಸಂಜೆ 6 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದೇವಿಯ ದರ್ಶನ ಪಡೆಯಲು ಬಯಸುವ ಭಕ್ತರು ಮಧ್ಯಾಹ್ನ 3 ಗಂಟೆಯೊಳಗೆ ಸರತಿ ಸಾಲಿನಲ್ಲಿ ಸೇರಿಕೊಳ್ಳಬೇಕು. ನಿಗದಿತ ಸಮಯದೊಳಗೆ ಸರತಿ ಸಾಲಿಗೆ ಪ್ರವೇಶಿಸಿದವರಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇಂದು ರಾತ್ರಿ ಸಿದ್ದೇಶ್ವರಸ್ವಾಮಿ ರಥೋತ್ಸವ ಹಾಗೂ ನಾಳೆ ಬೆಳಗ್ಗೆ ಕೆಂಡೋತ್ಸವ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಅಳವಡಿಸಿರುವ ಬ್ಯಾರಿಕೇಡ್ಗಳನ್ನು ತೆರವುಗೊಳಿಸಬೇಕಾಗಿದೆ. ಹೀಗಾಗಿ ಸಾರ್ವಜನಿಕ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದ್ದು, ಭಕ್ತರು ನಿಗದಿತ ಸಮಯದೊಳಗೆ ದೇವಿಯ ದರ್ಶನ ಪಡೆಯುವಂತೆ ದೇವಾಲಯದ ಆಡಳಿತಾಧಿಕಾರಿ ಜಗದೀಶ್ ಗಂಗಣ್ಣನವರ್ ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article