ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಬೇಲೂರು ತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ

Must read

ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಬೇಲೂರು ತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ

ಹಾಸನ: ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಘಟನೆ ಮಾಸುವ ಮುನ್ನವೇ ಹಾಸನ ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿ, ಕಾಲಿನಿಂದ ತುಳಿದು ಸಾಯಿಸಿದೆ. ಮೃತರನ್ನು ಹಫೀಜ್ (55) ಎಂದು ಗುರುತಿಸಲಾಗಿದೆ.
ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಬೇಲೂರು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಬೇಲೂರು ಭಾಗದಲ್ಲಿ ಕಾಡಾನೆ ದಾಳಿಗೆ ಸಂಭವಿಸುತ್ತಿರುವ ಸಾವುಗಳು ಸ್ಥಳೀಯರಲ್ಲಿ ಆತಂಕ ಹಾಗೂ ಆಕ್ರೋಶ ಮೂಡಿಸಿವೆ.
ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ
ಕಳೆದ ಶನಿವಾರ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಕಾಡಾನೆ ದಾಳಿಯಿಂದ ಚೌಡನಹಳ್ಳಿಯ ಜಯಮ್ಮ ಮೃತಪಟ್ಟಿದ್ದರು. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹವಿಟ್ಟು ಪ್ರತಿಭಟನೆ ನಡೆಸಿ, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದರು.
ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಬೇಲೂರು ಭಾಗದಲ್ಲಿರುವ ಕಾಡಾನೆಗಳನ್ನು ಓಡಿಸುವುದಾಗಿ ಸಿಸಿಎಫ್ ಏಡುಕೊಂಡಲ ಭರವಸೆ ನೀಡಿದ್ದರು. ಅದರಂತೆ ಬೇಲೂರು ಭಾಗಕ್ಕೆ ಕುಮ್ಮಿ ಆನೆಗಳನ್ನು ಕರೆತರುವ ಸಿದ್ಧತೆ ನಡೆದಿತ್ತು. ಇಂದು ಕುಮ್ಮಿ ಆನೆಗಳು ಆಗಮಿಸಬೇಕಿದ್ದು, ನಾಳೆಯಿಂದ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.
ಆದರೆ, ಕಾರ್ಯಾಚರಣೆ ಆರಂಭಕ್ಕೂ ಮುನ್ನವೇ ಮತ್ತೊಬ್ಬ ವ್ಯಕ್ತಿ ಕಾಡಾನೆ ದಾಳಿಗೆ ಬಲಿಯಾಗಿರುವುದು ಗ್ರಾಮಸ್ಥರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.
ಬೇಲೂರು ತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ
ಹಫೀಜ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನರು ಬೇಲೂರು ತಾಲೂಕು ಆಸ್ಪತ್ರೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ತರಲಾಗಿದ್ದ ಆ್ಯಂಬುಲೆನ್ಸ್ ಒಳಗೆ ಹೋಗದಂತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತದೇಹವನ್ನು ಮತ್ತೆ ಘಟನಾ ಸ್ಥಳಕ್ಕೆ ಕೊಂಡೊಯ್ಯುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -spot_img

More articles

- Advertisement -spot_img

Latest article