ಸಿಎಂ ಡಿಕೆ ಶಿವಕುಮಾರ್ ನಿವಾಸ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸ ಮತ್ತು ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸದಾಶಿವನಗರ ಪೊಲೀಸರು ಕಾರ್ತಿಕ್ ಎಂಬಾತನನ್ನು ಬಂಧಿಸಿದ್ದಾರೆ.
ಘಟನೆಯ ವಿವರದ ಪ್ರಕಾರ, ಕಾರ್ತಿಕ್ ಎಂಬಾತ ‘ನಮ್ಮ ಯಾತ್ರಿ’ ಆ್ಯಪ್ ಮೂಲಕ ಆಟೋ ಬುಕ್ ಮಾಡಿದ್ದ. ಬಳಿಕ ಆಟೋ ಚಾಲಕ ಭಗವಂತರಾಯನಿಗೆ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮುಂದಿನ ಬ್ಯಾರಿಕೇಡ್ ಬಳಿ ಬರುವಂತೆ ಸೂಚಿಸಿದ್ದ.
ಕಾರ್ತಿಕ್ ನೀಡಿದ ಸೂಚನೆಯಂತೆ ಆಟೋ ಚಾಲಕ ನಿಗದಿತ ಸ್ಥಳಕ್ಕೆ ಬಂದಿದ್ದರು. ಬಳಿಕ ಕಾರ್ತಿಕ್ಗೆ ಕರೆ ಮಾಡಿ ತಾನು ಸ್ಥಳಕ್ಕೆ ತಲುಪಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಅಲ್ಲಿದ್ದ ಪೊಲೀಸರಿಗೆ ಮೊಬೈಲ್ ಫೋನ್ ನೀಡುವಂತೆ ಕಾರ್ತಿಕ್ ಸೂಚಿಸಿದ್ದಾನೆ.
ಪೊಲೀಸರಿಗೇ ಬಾಂಬ್ ಬೆದರಿಕೆ!
ಆಟೋ ಚಾಲಕ ಪೊಲೀಸರಿಗೆ ಫೋನ್ ನೀಡಿದಾಗ, ಕಾರ್ತಿಕ್ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಮನೆ ಹಾಗೂ ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಅಲ್ಲದೆ, ಸಿಎಂ ಅವರ ಬೆಂಗಾವಲು ವಾಹನಗಳು ತೆರಳುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿ ಕಾರ್ತಿಕ್ ಬಂಧನ
ಘಟನೆ ಸಂಬಂಧ ಸದಾಶಿವನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಕಾರ್ತಿಕ್ನನ್ನು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಆರೋಪಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದಾನೆ ಎನ್ನಲಾಗಿದ್ದು, ಈ ಹಿಂದೆಯೂ ಹಲವು ಬಾರಿ ಬೆದರಿಕೆ ಕರೆಗಳನ್ನು ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ನಿವಾಸ ಮತ್ತು ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.



