ಮೂರು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿರುವುದ ರಿಂದ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಮುಂದೂಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸರ್ಕಾರಿ ಬಸ್ ದರ ಏರಿಕೆ ವಿಚಾರ ಪ್ರಸ್ತಾಪವಾಗುವ ನಿರೀಕ್ಷೆಯಿದೆ. ಆದರೆ, ಉಪ ಚುನಾವಣೆ ಘೋಷಣೆಯಾಗಿರುವುದರಿಂದ ಸದ್ಯಕ್ಕೆ ಪ್ರಯಾಣ ದರ ಏರಿಕೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಈಗಾಗಲೇ ವಿಧಾನಸಭಾ ಹಾಗೂ ಲೋಕಸಭಾ ಉಪಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ದರ ಏರಿಕೆ ಮಾಡುವುದು ಪಕ್ಷದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಉಪಚುನಾವಣೆ ಬಳಿಕವೇ ದರ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.