ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಮುದ್ದಹನುಮೇಗೌಡ ಇಂದು ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಾಂಗ್ರೆಸ್ ನಾಯಕರ ಮನವೊಲಿಕೆ ಬೆನ್ನಲ್ಲೇ ಅವರು ನಾಮಪತ್ರ ಹಿಂಪಡೆದಿದ್ದಾರೆ. ಈ ಮೂಲಕ ದೋಸ್ತಿಪಕ್ಷಗಳ ಸರ್ವಸಮ್ಮತ ಅಭ್ಯರ್ಥಿಯಾಗಿ ಸ್ಪರ್ಧಿಸಿರೋ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಹಾದಿ ಸುಗಮವಾಗಿದ್ದು, ಹೆಚ್ಡಿಡಿ ನಿರಾಳರಾಗಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ವಿರುದ್ಧ ಸೆಡ್ಡು ಹೊಡೆದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಹಾಗೂ ಕೆ.ಎನ್ ರಾಜಣ್ಣ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆ ಕೈ ನಾಯಕರು ಗೊಂದಲಕ್ಕೆ ಸಿಲುಕಿದ್ದರು.
ಇನ್ನು ನಾಮಪತ್ರ ವಾಪಸ್ ಪಡೆಯಬೇಕೋ ಬೇಡವೋ ಎಂಬ ಬಗ್ಗೆ ಇಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಮುದ್ದಹನುಮೇಗೌಡ ಸಭೆ ನಡೆಸಿದ್ದರು.