ಮಂಡ್ಯ ಲೋಕಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಲೋಪದೋಷಗಳನ್ನು ಮಾಡಿದ್ದರೂ ನಾಮಪತ್ರ ಅಂಗೀಕರಿಸಲಾಗಿದೆ.
ಇದಕ್ಕಾಗಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪತ್ರಿಕಾಗೋಷ್ಠಿಯಲ್ಲಿ ಆರೋಪ ಮಾಡಿದ್ದರು.
ತಮ್ಮ ಆರೋಪಗಳಿಗೆ ಪೂರಕವಾಗಿ ಸುಮಲತಾ ಅಂಬರೀಶ್ ಹಾಗೂ ಅವರ ಚುನಾವಣಾ ವಕ್ತಾರ ಮದನ್ ಪತ್ರಿಕಾಗೋಷ್ಠಿಯಲ್ಲಿ ಹಲವು ದಾಖಲೆಗಳನ್ನು ಪ್ರದರ್ಶಿಸಿದ್ದು, ಈ ಅಕ್ರಮದ ವಿರುದ್ಧ ಈಗಾಗಲೇ ಕೇಂದ್ರ ಚುನಾವಣಾ ಆಯೋಗದ ಮೊರೆ ಹೋಗಲಾಗಿದೆ. ಈ ವಿಚಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಆತಂಕ ತಂದೊಡ್ಡಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿರುವ ಕುಮಾರಸ್ವಾಮಿಯವರು ಈಗಾಗಲೇ ಖ್ಯಾತ ಕಾನೂನು ತಜ್ಞರನ್ನು ಸಂಪರ್ಕಿಸಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆನ್ನಲಾಗಿದೆ. ನಿಖಿಲ್ ಕುಮಾರಸ್ವಾಮಿಯವರ ನಾಮಪತ್ರ ಈಗಾಗಲೇ ಅಂಗೀಕಾರವಾಗಿರುವ ಕಾರಣ ಸ್ಪರ್ಧೆ ಕುರಿತು ಯಾವುದೇ ಅಡೆತಡೆ ಇಲ್ಲವಾದರೂ ಮುಂದಿನ ದಿನಗಳಲ್ಲಿ ಮತ್ಯಾವುದೇ ಸಮಸ್ಯೆ ಎದುರಾಗಬಾರದೆಂಬ ಕಾರಣಕ್ಕೆ ಮುಖ್ಯಮಂತ್ರಿಗಳು, ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದಾರೆನ್ನಲಾಗಿದೆ.