ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ ಅಭ್ಯರ್ಥಿಗಳನ್ನು ಮಣಿಸಲು ಜಂಟಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಜೆಪಿ ಸಂಸದರನ್ನು ಶ್ಲಾಘಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಈ ಬಾರಿಯೂ ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಹ್ಲಾದ್ ಜೋಶಿ ಅವರನ್ನು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಶ್ಲಾಘಿಸಿರುವ ದಿನೇಶ್ ಗುಂಡೂರಾವ್, ಪ್ರಹ್ಲಾದ್ ಜೋಷಿಯವರನ್ನು ಹೊರತುಪಡಿಸಿದರೆ ಬೇರೆ ಯಾವ ಬಿಜೆಪಿ ಸಂಸದರೂ ಕೆಲಸ ಮಾಡಿಲ್ಲ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಕುರಿತು ಸ್ಪಷ್ಟನೆ ನೀಡಿದ ದಿನೇಶ್ ಗುಂಡೂರಾವ್, ಈ ಹೊಂದಾಣಿಕೆ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತ.ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಂದಾಣಿಕೆ ಇರುವುದಿಲ್ಲ ಎಂದು ತಿಳಿಸಿದರು.