ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಗೃಹ ಸಚಿವರಾಗಿರುವ ಅಮಿತ್ ಶಾ ಈ ವರ್ಷಾಂತ್ಯದವರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಮುಂದುವರೆಯಲಿದ್ದು, ಪಕ್ಷದ ಕಾರ್ಯಾಧ್ಯಕ್ಷರಾಗಿ ಬಿಜೆಪಿಯಿಂದ ನೇಮಕಗೊಂಡಿದ್ದಾರೆ. ಇದರ ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪನವರೂ ಸಹ ಇನ್ನಾರು ತಿಂಗಳು ತಮ್ಮ ಸ್ಥಾನದಲ್ಲಿ ಮುಂದುವರೆಯಲಿದ್ದಾರೆಂದು ಹೇಳಲಾಗಿದೆ.
ಮುಂದಿನ ದಿನಗಳಲ್ಲಿ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿರುವುದರಿಂದ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಅಮಿತ್ ಶಾ ಅವರ ಮುಂದುವರಿಕೆಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಿಂದಾಗಿ ಯಡಿಯೂರಪ್ಪನವರ ರಾಜ್ಯಾಧ್ಯಕ್ಷ ಸ್ಥಾನವೂ ಅಭಾದಿತ ಎಂದು ತಿಳಿದುಬಂದಿದೆ.
ಒಂದೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಯಡಿಯೂರಪ್ಪನವರು ಮುಖ್ಯಮಂತ್ರಿಯಾದರೆ ಆ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಮುಂದಾಗಬಹುದೆಂದು ಹೇಳಲಾಗಿದ್ದು, ಅಲ್ಲಿಯವರೆಗೆ ಯಡಿಯೂರಪ್ಪನವರು ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.