ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕರ್ನಾಟಕದಲ್ಲಿಯೂ ದ್ವಿತೀಯ ಪಿಯು ಪರೀಕ್ಷೆ ರದ್ದಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
ಮಂಗಳವಾರ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಕರ್ನಾಟಕದ ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಮಾತನಾಡಿದ್ದು, “ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ” ಎಂದರು.
“ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು ಮಾಡಿದೆ. ರಾಜ್ಯ ಪಠ್ಯಕ್ರಮ ಅನುಸರಿಸಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನದ ಕುರಿತು ತೀರ್ಮಾನ ಮಾಡಲಾಗುತ್ತದೆ” ಎಂದು ತಿಳಿಸಿದರು.
ಕರ್ನಾಟಕದಲ್ಲಿ ಮೇ 24ರಿಂದ ಜೂನ್ 10ರ ತನಕ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ದಿನಾಂಕ ಪ್ರಕಟಿಸಲಾಗಿತ್ತು. ಆದರೆ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.