ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿರುವ ಬಸವರಾಜ ಬೊಮ್ಮಾಯಿಗೆ ಉಸ್ತುವಾರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಭ ಕೋರಿದ್ದಾರೆ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ವಿಶ್ವಾಸವಿದೆ ಎಂದು ಟ್ವೀಟ್ ಮಾಡಿದ್ದಾರೆ.
“ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಷಯಗಳು. ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರದಲ್ಲಿ ನೀವು ರಾಜ್ಯವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತೀರಿ ಮತ್ತು ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತೀರಿ ಎಂದು ನನಗೆ ವಿಶ್ವಾಸವಿದೆ,” ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನಂತರದ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ರಾಜ್ಯದ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿರನ್ನು ಆಯ್ಕೆ ಮಾಡಲಾಯಿತು. ಉಸ್ತುವಾರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಆಯ್ಕೆ ಆಗುತ್ತಿದ್ದಂತೆ ಬಿಎಸ್ ವೈ ಕಾಲಿಗೆ ಬಿದ್ದು ನಮಸ್ಕರಿಸಿದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಜುಲೈ 28ರ ಮಧ್ಯಾಹ್ನ 3.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.