ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ರಾಜ್ಯದ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಕೊರೊನಾ ಹರಡುವಿಕೆ ತಡೆಯಲು ಅವಶ್ಯಕವಾಗಿ ಪರೀಕ್ಷೆಗಳನ್ನು ಕೈಗೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಶುಕ್ರವಾರ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿದ ಅವರು, ರಾಜ್ಯದ ಕೊರೊನಾ ಸ್ಥಿತಿಗತಿ ಕುರಿತು ಮಾತನಾಡಿದ್ದಾರೆ. ಕೊರೊನಾ ಮುಂದಿನ ಅಲೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
“ರಾಜ್ಯದ ಗಡಿ ಪ್ರದೇಶಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಕೊರೊನಾ ಪರೀಕ್ಷೆ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನಮ್ಮ ಸದ್ಯದ ಆದ್ಯತೆ ಕೊರೊನಾ ಸೋಂಕಿನ ಹರಡುವಿಕೆ ತಡೆಯುವುದು” ಎಂದು ಹೇಳಿದ್ದಾರೆ






