ಶ್ರಾವಣ ಮಾಸ ಆರಂಭವಾಗಿದ್ದು, ದೇವಸ್ಥಾನಗಳಲ್ಲಿ ಹೆಚ್ಚು ಜನರು ಸೇರುವ ಸಾಧ್ಯತೆಯಿರುವುದರಿಂದ ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಬೆಂಗಳೂರು ನಗರದ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ನಗರದಲ್ಲಿ ಈಗಾಗಲೇ 144 ಸೆಕ್ಷನ್ ಜಾರಿಯಲ್ಲಿದೆ. ಇದರೊಂದಿಗೆ ದೇವಸ್ಥಾನಗಳಿಗೆ ಜನರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಶ್ರಾವಣ ಮಾಸದಲ್ಲಿ ದೇವಸ್ಥಾನಗಳಲ್ಲಿ ಅತಿ ಹೆಚ್ಚಿನ ಜನರು ಸೇರುತ್ತಾರೆ. ಅದರಲ್ಲೂ ವಾರಾಂತ್ಯದಲ್ಲಿ ಹಾಗೂ ರಜಾ ದಿನಗಳಲ್ಲಿ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಅಧಿಕವಿರುತ್ತದೆ. ಒಂದೆಡೆ ಹೆಚ್ಚಿನ ಜನರು ಸೇರಿದರೆ ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗುವ ಕಾರಣ ನಿರ್ಬಂಧ ಹೇರಿ ಈ ಆದೇಶ ಜಾರಿಗೊಳಿಸಿರುವುದಾಗಿ ತಿಳಿದುಬಂದಿದೆ.
ರಾಜ್ಯದಲ್ಲಿ ಸೋಂಕು ನಿಯಂತ್ರಣಗೊಳ್ಳದೇ ಇರುವುದರಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹಾಗೂ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕಲುಬುರಗಿ, ವಿಜಯಪುರದಲ್ಲಿ ಶನಿವಾರ ಮತ್ತು ಭಾನುವಾರ ಲಾಕ್‌ಡೌನ್ ಘೋಷಣೆಯಾಗಿದೆ.